ADVERTISEMENT

`ಸಣ್ಣ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಉತ್ತೇಜಿಸಬೇಕು'

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 22:00 IST
Last Updated 8 ಡಿಸೆಂಬರ್ 2012, 22:00 IST

ಬೆಂಗಳೂರು:  `ರಾಜ್ಯದಲ್ಲಿ ಹೊಸದಾಗಿ ಸಣ್ಣ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡಬೇಕು' ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ವಿಶ್ವನಾಥ ರೆಡ್ಡಿ ಹೇಳಿದರು.

ನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ನೌಕರರ ಸಂಘದ `ಬೆಳ್ಳಿಹಬ್ಬ' ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

`ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳ ಬೆಳವಣಿಗೆಗೆ ಹೋಲಿಸಿದರೆ ಸಣ್ಣ ಕೈಗಾರಿಕೆಗಳು ಇನ್ನೂ ಸಾಕಷ್ಟು ಅಭಿವೃದ್ಧಿ ಹೊಂದಬೇಕಿದೆ.

ರಾಜ್ಯದಲ್ಲಿ ಹೊಸದಾಗಿ 25ರಿಂದ 30 ಕಡೆಗಳಲ್ಲಿ ಸಣ್ಣ ಕೈಗಾರಿಕಾ ವಲಯಗಳ ಸ್ಥಾಪನೆಗೆ ಕೇಂದ್ರದ ಸಣ್ಣ ಕೈಗಾರಿಕಾ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರದ ನೆರವಿಗಾಗಿ ಕಾಯಲಾಗುತ್ತಿದೆ' ಎಂದು ಅವರು ತಿಳಿಸಿದರು.

`ಸಣ್ಣ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಕೇಂದ್ರ ಸಣ್ಣ ಕೈಗಾರಿಕಾ ಸಚಿವಾಲಯವು 25 ಕೋಟಿ ರೂಪಾಯಿ ಪ್ರೋತ್ಸಾಹಧನವನ್ನು ಮೀಸಲಿಟ್ಟಿದೆ. ಸಣ್ಣ ಕೈಗಾರಿಕೆಗಳಲ್ಲಿ ತೊಡಗಿರುವವರಿಗೆ ಇದರ ಸದುಪಯೋಗ ತಲುಪಿಸಲು ನಿಗಮದಿಂದ ಪ್ರಯತ್ನಿಸಲಾಗುತ್ತಿದೆ. ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೂರಕವಾಗಿ ಸ್ಪಂದಿಸಬೇಕು' ಎಂದು ಅವರು ತಿಳಿಸಿದರು.

ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, `ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, ಇದರ ನಿವಾರಣೆಗೆ ಸಣ್ಣ ಕೈಗಾರಿಕೆಗಳ ಸ್ಥಾಪನೆ ಅಗತ್ಯ. ಹೀಗಾಗಿ ಹೆಚ್ಚು ಹೆಚ್ಚು ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರಗಳು ಪ್ರೋತ್ಸಾಹ ನೀಡಬೇಕು' ಎಂದರು.

`ಬೃಹತ್ ಮಟ್ಟದ ಕೈಗಾರಿಕೆಗಳ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಜಾಗತಿಕ ಹೂಡಿಕೆದಾರರ ಸಮಾವೇಶಗಳನ್ನು ಮಾಡಿದೆ. ಆದರೆ, ಈ ಸಮಾವೇಶಗಳಿಂದ ಸಂಗ್ರಹವಾದ ಒಟ್ಟು ಬಂಡವಾಳ ಎಷ್ಟು ಎಂಬುದರ ಮಾಹಿತಿ ಸರ್ಕಾರದ ಬಳಿಯೇ ಇಲ್ಲ. ಈ ಬಗ್ಗೆ ಸರ್ಕಾರ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು' ಎಂದು ಅವರು ಒತ್ತಾಯಿಸಿದರು.

ಸಮಾರಂಭದಲ್ಲಿ ನೌಕರರ ಸಂಘದ ಅಧ್ಯಕ್ಷ ಆರ್.ವಿ.ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.