ADVERTISEMENT

ಸದಾನಂದಗೌಡರಿಗೆ ಶಹಭಾಷ್‌ಗಿರಿ!

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2012, 20:15 IST
Last Updated 24 ಫೆಬ್ರುವರಿ 2012, 20:15 IST

ಬೆಂಗಳೂರು: ರಾಜ್ಯ ಬಿಜೆಪಿ ಬೆಳವಣಿಗೆಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸ್ಪಷ್ಟವಾಗಿ ನಿರಾಕರಿಸಿರುವ ರಾಜ್ಯಪಾಲ ಎಚ್.ಆರ್. ಭಾರದ್ವಾಜ್, ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಸರ್ಕಾರದ ಬಗ್ಗೆ ಮಾತ್ರ `ಶಹಭಾಷ್‌ಗಿರಿ~ ನೀಡಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಸೆಂಟ್ರಲ್ ಕಾಲೇಜು ಕ್ಯಾಂಪಸ್‌ನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಅಖಿಲ ಭಾರತ ಅಣಕು ನ್ಯಾಯಾಲಯ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಬದಲಾವಣೆಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೇಡಿಕೆ ಮುಂದಿಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ, `ನಾನು ಬೆಳಿಗ್ಗೆಯಿಂದ ಉಪನ್ಯಾಸ ಕಾರ್ಯಕ್ರಮಗಳಲ್ಲಿಯೇ ತೊಡಗಿಸಿಕೊಂಡಿದ್ದೆ. ಹೀಗಾಗಿ, ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಲಿಲ್ಲ~ ಎಂದು ಪ್ರತಿಕ್ರಿಯಿಸಿದರು.

`ಯಡಿಯೂರಪ್ಪನವರ ಬಗ್ಗೆ ನನಗೇನೂ ವೈಯಕ್ತಿಕ ದ್ವೇಷ ಇಲ್ಲ. ಹಿಂದಿನದೆಲ್ಲಾ ಮುಗಿದ ಕತೆ. ಅವರೀಗ ಆರೋಪ ಎದುರಿಸುತ್ತಿದ್ದಾರೆ. ಅವರ ಬಗ್ಗೆ ನನಗೆ ಅನುಕಂಪವಿದೆ~ ಎಂದಷ್ಟೇ ಹೇಳಿ ನುಣುಚಿಕೊಂಡರು.

`ಮುಖ್ಯಮಂತ್ರಿ ಡಿ.ವಿ. ಸದಾನಂದನೌಡ ನೇತೃತ್ವದ ಸರ್ಕಾರದ ಬಗ್ಗೆ ಮೆಚ್ಚುಗೆ ಇದೆ. ಹಗರಣಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಸರ್ಕಾರದ ಬಗ್ಗೆ ಜನರಲ್ಲಿಯೂ ಒಳ್ಳೆಯ ಭಾವನೆ ಇದೆ~ ಎಂದ ಅವರು, ಬಿಜೆಪಿ ಚಿಂತನ-ಮಂಥನ ಶಿಬಿರದ ಬಗ್ಗೆ `ನೋ ಕಾಮೆಂಟ್ಸ್~ ಎಂದಷ್ಟೇ ಹೇಳಿ ಕಾರು ಹತ್ತಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.