ADVERTISEMENT

ಸಮಗ್ರ ಶಿಕ್ಷಣ ವ್ಯವಸ್ಥೆ ಜಾರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2011, 19:25 IST
Last Updated 8 ನವೆಂಬರ್ 2011, 19:25 IST
ಸಮಗ್ರ ಶಿಕ್ಷಣ ವ್ಯವಸ್ಥೆ ಜಾರಿಗೆ ಸಲಹೆ
ಸಮಗ್ರ ಶಿಕ್ಷಣ ವ್ಯವಸ್ಥೆ ಜಾರಿಗೆ ಸಲಹೆ   

ಬೆಂಗಳೂರು: `ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಗೆ ಒತ್ತು ನೀಡಬೇಕಿದೆ~ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹೇಳಿದರು.

ಇಂಡಸ್ ಪ್ರತಿಷ್ಠಾನವು ನಗರದ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಇಂಡೋ-ಗ್ಲೋಬಲ್ ಶಿಕ್ಷಣ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

`ಈಚಿನ ವರ್ಷಗಳಲ್ಲಿ ಶಿಕ್ಷಣ ವ್ಯವಸ್ಥೆಯು ಸಮಗ್ರತೆಯನ್ನು ಕಳೆದುಕೊಳ್ಳುತ್ತಿದೆ. ಪ್ರತಿಯೊಂದನ್ನು ಬಿಡಿ ಬಿಡಿಯಾಗಿ ವ್ಯಾಸಂಗ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರ ಬದಲಿಗೆ ಸಮಗ್ರ ವಿಷಯಗಳನ್ನು ಒಳಗೊಂಡ ಶಿಕ್ಷಣ ವ್ಯವಸ್ಥೆ ಇರಬೇಕು~ ಎಂದು ಅಭಿಪ್ರಾಯಪಟ್ಟರು.

`ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 55ರಷ್ಟು ಮಂದಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಹಾಗಾಗಿ ಯುವ ಜನತೆಗೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ. ಮುಂದಿನ ಐದು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ವಿದೇಶಿ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸಮಾವೇಶ ಆಯೋಜಿಸಿರುವುದು ಪ್ರಸ್ತುತವೆನಿಸಿದೆ~ ಎಂದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್.ಮಹೇಶಪ್ಪ, `ಜಾಗತೀಕರಣದಿಂದ ಜಗತ್ತಿನ ರಾಷ್ಟ್ರಗಳು ಸಮೀಪವಾದಂತಾಗಿದ್ದು, ಗಡಿರಹಿತ ರಾಷ್ಟ್ರಗಳಾಗಿ ಹೊರಹೊಮ್ಮುತ್ತಿವೆ. ವಿದೇಶಿ ಶಿಕ್ಷಣ ಸಂಸ್ಥೆಗಳು ಭಾರತದ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ತಮ್ಮ ಕೇಂದ್ರಗಳನ್ನು ತೆರೆಯಲು ಈ ಸಮಾವೇಶ ಸಹಕಾರಿ ಎನಿಸಿದೆ~ ಎಂದು ಹೇಳಿದರು.

`ಗುಣಮಟ್ಟದ ವಿಶ್ವವಿದ್ಯಾಲಯ, ಕೈಗಾರಿಕೆಗಳು ಹಾಗೂ ಉತ್ತಮ ಸರ್ಕಾರದಿಂದ ದೇಶದ ಅಭಿವೃದ್ಧಿ ಸಾಧ್ಯ. ಹಾಗಾಗಿ ತಂತ್ರಜ್ಞಾನದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲೂ ಸಂಶೋಧನೆ ಮತ್ತು ಸುಧಾರಣೆ ಹಾಗೂ ಸಂಶೋಧನಾ ಪ್ರಬಂಧ ಮಂಡನೆಗೆ ಆದ್ಯತೆ ನೀಡಲಾಗಿದೆ~ ಎಂದರು.

ಬೆಂಗಳೂರು ವಿ.ವಿ. ಕುಲಪತಿ ಪ್ರೊ.ಎನ್.ಪ್ರಭುದೇವ್, ಕೆನಡಾದ ಕಾರ್ಲ್‌ಟನ್ ವಿ.ವಿ ಆಡಳಿತ ಮಂಡಳಿಯ ಜಾಕ್ಸ್ ಜೆ.ಎಂ. ಶೋರ್, ಇಂಡೋನೇಷಿಯಾದ ಸುಲ್ತಾನ್ ಅಗುಂಗ್ ಇಸ್ಲಾಮಿಕ್ ವಿ.ವಿಯ ಅಧ್ಯಕ್ಷ ಡಾ.ಖಮಲುದ್ದೀನ್, ಇಂಡಸ್ ಪ್ರತಿಷ್ಠಾನದ ಅಧ್ಯಕ್ಷ ಸಿ.ಡಿ. ಅರಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.