ADVERTISEMENT

`ಸರೋಜಿನಿ ಮಹಿಷಿ ವರದಿ ಪರಿಷ್ಕರಿಸಿ'

​ಪ್ರಜಾವಾಣಿ ವಾರ್ತೆ
Published 28 ಜುಲೈ 2013, 20:11 IST
Last Updated 28 ಜುಲೈ 2013, 20:11 IST
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಗರದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ತಿಮ್ಮೇಗೌಡ ಅವರು `ತಮಿಳುನಾಡು ಹಾಗೂ ಗೋವಾ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ' ವಿತರಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ' ಚಂದ್ರು, ಸಾಹಿತಿ ಚಂದ್ರಶೇಖರ ಪಾಟೀಲ, ಗೋವಾ ಕನ್ನಡ ಸಂಘದ ಅಧ್ಯಕ್ಷ ಕುಪ್ಪಸದ ಚಿತ್ರದಲ್ಲಿದ್ದಾರೆ  	-ಪ್ರಜಾವಾಣಿ ಚಿತ್ರ
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಗರದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ತಿಮ್ಮೇಗೌಡ ಅವರು `ತಮಿಳುನಾಡು ಹಾಗೂ ಗೋವಾ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ' ವಿತರಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ' ಚಂದ್ರು, ಸಾಹಿತಿ ಚಂದ್ರಶೇಖರ ಪಾಟೀಲ, ಗೋವಾ ಕನ್ನಡ ಸಂಘದ ಅಧ್ಯಕ್ಷ ಕುಪ್ಪಸದ ಚಿತ್ರದಲ್ಲಿದ್ದಾರೆ -ಪ್ರಜಾವಾಣಿ ಚಿತ್ರ   

ಬೆಂಗಳೂರು: `ಸರೋಜಿನಿ ಮಹಿಷಿ ವರದಿಯನ್ನು ಈಗಿನ ಕಾಲಘಟ್ಟಕ್ಕೆ ತಕ್ಕಂತೆ ಪರಿಷ್ಕರಿಸಿ ರಾಜ್ಯ ಸರ್ಕಾರವು ಜಾರಿಗೆ ತರಬೇಕು' ಎಂದು ಸಾಹಿತಿ ಚಂದ್ರಶೇಖರ ಪಾಟೀಲ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಗರದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ `ತಮಿಳುನಾಡು ಹಾಗೂ ಗೋವಾ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ' ವಿತರಿಸಿ ಅವರು ಮಾತನಾಡಿದರು. `ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ 26 ವರ್ಷಗಳಾಗಿವೆ. ಇದುವರೆಗೂ ಬಂದಿರುವ ಸರ್ಕಾರಗಳೆಲ್ಲಾ ವರದಿಯನ್ನು ನಿರ್ಲಕ್ಷಿಸುತ್ತ ಬಂದಿವೆ. ಪ್ರಸ್ತುತ ಖಾಸಗಿ ವಲಯದ ಉದ್ಯೋಗದಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇದರಿಂದ, ಮಹಿಷಿ ವರದಿಯನ್ನು ಪರಿಷ್ಕರಿಸಿ ಸರ್ಕಾರ ಜಾರಿಗೊಳಿಸಬೇಕು' ಎಂದು ಆಗ್ರಹಿಸಿದರು.

`ಕಾಸರಗೋಡಿನಲ್ಲಿ ದೀರ್ಘ ಕಾಲದ ಹೋರಾಟ ನಡೆಸಿದ ಕಯ್ಯಾರ ಕಿಞ್ಞಣ್ಣರೈ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ವರ್ಷಪೂರ್ತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಅಭಿನಂದನೀಯವಾಗಿದೆ. ಅದೇ ರೀತಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು' ಎಂದು ಒತ್ತಾಯಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ' ಚಂದ್ರು ಮಾತನಾಡಿ, `ಭಾರತದ ಎಲ್ಲ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಬೇಕು. ಎಲ್ಲ ರಾಜ್ಯಗಳ ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರೈಸುವ ನೀತಿಯನ್ನು ಜಾರಿಗೆ ತರಬೇಕು' ಎಂದು ಆಗ್ರಹಿಸಿದರು.

`ಹೊರರಾಜ್ಯಗಳಲ್ಲಿರುವ ಪ್ರತಿಯೊಂದು ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಮುಂದಿನ ವಾರ ಆಂಧ್ರಪ್ರದೇಶ, ಮಹಾರಾಷ್ಟ್ರದ ಕನ್ನಡ ಮಾಧ್ಯಮ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆಯಾ ರಾಜ್ಯದಲ್ಲಿಯೇ  ವಿತರಿಸಲಾಗುವುದು' ಎಂದು ತಿಳಿಸಿದರು.
ತಮಿಳುನಾಡು ಹಾಗೂ ಗೋವಾದ  ವಿವಿಧ ಕನ್ನಡ ಮಾಧ್ಯಮ ಶಾಲೆಗಳ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.