ADVERTISEMENT

ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2012, 19:30 IST
Last Updated 20 ಏಪ್ರಿಲ್ 2012, 19:30 IST

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರನ್ನು ಕೆ.ಆರ್.ಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಜಾಲಹಳ್ಳಿ ನಿವಾಸಿ ಪಾಪಣ್ಣ ಎಂಬುವರ ಪುತ್ರ ಪಿ.ಚೇತನ್‌ಕುಮಾರ್ (28) ಬಂಧಿತ ಆರೋಪಿ. ಎಚ್‌ಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಆತ, ಸೌಮ್ಯಾ ಎಂಬುವರನ್ನು 11 ತಿಂಗಳ ಹಿಂದೆ ವಿವಾಹವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಚೇತನ್‌ಕುಮಾರ್ ಪತ್ನಿಯ ಜತೆ ದೇವಸಂದ್ರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಆತನ ತಂದೆ ಪಾಪಣ್ಣ ಮತ್ತು ತಾಯಿ ಲೀಲಾವತಿ ಅವರು ಜಾಲಹಳ್ಳಿಯಲ್ಲಿ ನೆಲೆಸಿದ್ದರು. ಚೇತನ್‌ಕುಮಾರ್ ಮತ್ತು ಪೋಷಕರು, ತವರು ಮನೆಯಿಂದ ಐದು ಲಕ್ಷ ರೂಪಾಯಿ ಹಣ ತರುವಂತೆ ಸೌಮ್ಯಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಸೌಮ್ಯಾ ಅವರು ನೀಡಿದ ದೂರು ಆಧರಿಸಿ ಆತನನ್ನು ಬಂಧಿಸಿ ನಗರದ ಹತ್ತನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು ಎಂದು ಹೇಳಿದ್ದಾರೆ.

ಪ್ರಕರಣದ ಇತರೆ ಆರೋಪಿಗಳಾದ ಪಾಪಣ್ಣ, ಲೀಲಾವತಿ ಮತ್ತು ಅವರ ಕೆಲ ಸಂಬಂಧಿಕರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.