ADVERTISEMENT

ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಪ್ರಶ್ನಿಸಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2013, 19:59 IST
Last Updated 12 ಜೂನ್ 2013, 19:59 IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಟ್ಟು ಸರ್ಕಾರ ಫೆ. 8ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಜೆ. ವರಲಕ್ಷ್ಮಿ ಎಂಬುವರು ಅರ್ಜಿ ಸಲ್ಲಿಸಿದ್ದಾರೆ.

ಫೆ. 8ರ ಮೊದಲು, ಮೇಯರ್ ಹುದ್ದೆಯನ್ನು ಸರ್ಕಾರ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಿಟ್ಟಿತ್ತು. ಆದರೆ ಹೊಸ ಅಧಿಸೂಚನೆಯು, ಈ ಹುದ್ದೆಯನ್ನು 2013-14ನೇ ಅವಧಿಗೆ ಸಾಮಾನ್ಯ ವರ್ಗದ ಯಾವುದೇ ಅಭ್ಯರ್ಥಿಗೆ ನೀಡಬಹುದು ಎಂದು ಹೇಳುತ್ತದೆ. ಇದು ಸರಿಯಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಇದರ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ ಅವರು ಮಂಗಳವಾರ ನಡೆಸಿದರು. ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಅವರು ವಿಚಾರಣೆಯನ್ನು ಒಂದು ವಾರ ಮುಂದೂಡಿದರು.

ನೋಟಿಸ್ ಜಾರಿ
ಆರ್ಥಿಕವಾಗಿ ಹಿಂದುಳಿದವರಿಗೆ ಈಜಿಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ಸಮುಚ್ಛಯಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, `ಈಜಿಪುರ ವಸತಿ ಸಮುಚ್ಛಯಕ್ಕೆ ಸಂಬಂಧಿಸಿದಂತೆ 2011ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವರಿಗೆ ನೋಟಿಸ್ ಜಾರಿಗೊಳಿಸಬೇಕು' ಎಂದು ಮಂಗಳವಾರ ನಿರ್ದೇಶನ ನೀಡಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಈಜಿಪುರದಲ್ಲಿ 90ರ ದಶಕದಲ್ಲಿ ಫ್ಲ್ಯಾಟ್‌ಗಳನ್ನು ನೀಡಲಾಗಿತ್ತು. ಈ ಫ್ಲ್ಯಾಟ್‌ಗಳು ಸದೃಢವಾಗಿಲ್ಲ ಎಂಬ ಕಾರಣ ನೀಡಿ, ಅನೇಕರು ಅವುಗಳನ್ನು ಬೇರೆಯವರಿಗೆ ಹಸ್ತಾಂತರ ಮಾಡಿದರು. ಈ ನಡುವೆ, ಈಜಿಪುರದ ಆ ಪ್ರದೇಶವನ್ನು ಅಭಿವೃದ್ಧಿಪಡಿಸಿ, ಅಲ್ಲಿ ವಸತಿ ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿತು ಎಂದು ಶಾಂತಾ ಮೇರಿ ಮತ್ತು 139 ಇತರರು ಸಲ್ಲಿಸಿರುವ ಅರ್ಜಿಯಲ್ಲಿ ವಿವರಿಸಲಾಗಿದೆ.

ಫ್ಲ್ಯಾಟ್‌ಗಳನ್ನು ಮೂಲ ನಿವಾಸಿಗಳಿಂದ ಪಡೆದುಕೊಂಡವರು ಬಿಬಿಎಂಪಿ ನೀಡಿರುವ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಪತ್ರ ಹೊಂದಿದ್ದಾರೆ. ಈಜಿಪುರದಲ್ಲಿ ಮೊದಲು ನಿರ್ಮಿಸಿದ ಅಪಾರ್ಟ್‌ಮೆಂಟ್‌ಗಳನ್ನು ಉರುಳಿಸಿ, ಹೊಸದಾಗಿ ನಿರ್ಮಿಸುವ ಅಪಾರ್ಟ್‌ಮೆಂಟ್‌ಗಳಲ್ಲಿ ಮೂಲ ನಿವಾಸಿಗಳಿಗೆ ಮಾತ್ರ ಪುನರ್ವಸತಿ ಕಲ್ಪಿಸಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ ನಂತರ ನಡೆದ ಪ್ರತಿಭಟನೆಗಳ ಕಾರಣ, ಮೂಲ ನಿವಾಸಿಗಳಿಂದ ಫ್ಲ್ಯಾಟ್ ಪಡೆದುಕೊಂಡವರಿಗೂ ಪುನರ್ವಸತಿ ಕಲ್ಪಿಸಲು ಬಿಬಿಎಂಪಿ ನಿರ್ಣಯ ಕೈಗೊಂಡಿತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಈ ನಡುವೆ ಮೂಲನಿವಾಸಿಗಳು 2011ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮೂಲನಿವಾಸಿಗಳಾದ 1,512 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಬೇಕು, ಇನ್ನುಳಿದವರನ್ನು ಆರ್ಥಿಕವಾಗಿ ಹಿಂದುಳಿದವರ ವಸತಿ ಸಮುಚ್ಛಯ ಇದ್ದ ಸ್ಥಳದಿಂದ ತೆರವು ಮಾಡಬೇಕು ಎಂದು ಆದೇಶಿಸಿತು.

ಈ ಆದೇಶ ಪ್ರಶ್ನಿಸಿ ಶಾಂತಾ ಮೇರಿ ಮತ್ತು ಇತರರು ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಡೆಸಿತು. ಮೂಲ ನಿವಾಸಿಗಳಿಂದ ಫ್ಲ್ಯಾಟ್‌ಗಳನ್ನು ಪಡೆದುಕೊಂಡ ತಮಗೂ ಪುನರ್ವಸತಿ ಕಲ್ಪಿಸಬೇಕು ಎಂದು ಅವರು ಕೋರಿದ್ದಾರೆ.

`2011ರಲ್ಲಿ ಅರ್ಜಿ ಸಲ್ಲಿಸಿದ್ದ ಮೂಲ ನಿವಾಸಿಗಳಿಗೂ ನೋಟಿಸ್ ಜಾರಿ ಮಾಡೋಣ. ಅವರ ವಾದ ಆಲಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳೋಣ' ಎಂದು ಪೀಠ ಹೇಳಿತು. ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಲಾಗಿದೆ.

ಈಜಿಪುರದಲ್ಲಿ ಅರ್ಥಿಕವಾಗಿ ಹಿಂದುಳಿದ ವರ್ಗಗಳ ವಸತಿ ಸಮುಚ್ಛಯದಲ್ಲಿ ಅಕ್ರಮವಾಗಿ ವಾಸ ಮಾಡುತ್ತಿದ್ದ 148 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಬೇರೆಡೆ ಸ್ಥಳ ಗೊತ್ತುಮಾಡಲಾಗಿದೆ ಎಂದು ಬಿಬಿಎಂಪಿ ಪರ ವಕೀಲರು ವಿಭಾಗೀಯ ಪೀಠಕ್ಕೆ ತಿಳಿಸಿದರು.

ಮಾರುಕಟ್ಟೆ ನಿರ್ಮಿಸಿಲ್ಲ
ಬನಶಂಕರಿ ದೇವಸ್ಥಾನ ಬಳಿ ವಾಹನಗಳ ನಿಲುಗಡೆಗೆ ನಿಗದಿ ಮಾಡಿದ್ದ ಸ್ಥಳದಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮಾಜಿ ಸದಸ್ಯ ಶ್ರೀರಾಮೇಗೌಡ ಮತ್ತು ಇತರರು ಸಲ್ಲಿಸಿರುವ ಅರ್ಜಿಯಲ್ಲಿ ಹುರುಳಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಹೈಕೋರ್ಟ್‌ನಲ್ಲಿ ವಾದಿಸಿದೆ.

`ವಾಹನಗಳ ನಿಲುಗಡೆಗೆ ನಿಗದಿ ಮಾಡಿದ್ದ ಸ್ಥಳದಲ್ಲಿ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ ಎಂಬುದು ಸುಳ್ಳು. ಖಾಸಗಿ ವ್ಯಕ್ತಿಯೊಬ್ಬರಿಂದ ಸ್ವಾಧೀನ ಮಾಡಿಕೊಂಡಿರುವ ಜಮೀನಿನಲ್ಲಿ, ಮೆಟ್ರೊ ರೈಲು ನಿಲ್ದಾಣಕ್ಕೆ ಸಾಗಲು ಮೆಟ್ಟಿಲುಗಳನ್ನು ನಿರ್ಮಿಸಲಾಗುತ್ತಿದೆ. ಇದರಲ್ಲಿ ಅಕ್ರಮ ನಡೆದಿಲ್ಲ ' ಎಂದು ಬಿಎಂಆರ್‌ಸಿಎಲ್ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದರು.

`ನಿಲ್ದಾಣಕ್ಕೆ ನಿಗದಿ ಮಾಡಿದ್ದ ಸ್ಥಳದಲ್ಲಿ ಮಾರುಕಟ್ಟೆ ನಿರ್ಮಿಸುವುದರಿಂದ ಸ್ಥಳದಲ್ಲಿ ವಾಹನ ಸಂಚಾರ ದಟ್ಟಣೆ ಅಧಿಕವಾಗುತ್ತದೆ' ಎಂದು ಅರ್ಜಿದಾರರು ದೂರಿದ್ದಾರೆ. ಇದನ್ನು ಅಲ್ಲಗಳೆದ ಸರ್ಕಾರದ ಪರ ವಕೀಲರು, `ಸಂಚಾರ ದಟ್ಟಣೆಯಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ' ಎಂದು ವಿವರಣೆ ನೀಡಿದರು.

ಮಾರುಕಟ್ಟೆ ನಿರ್ಮಾಣ ಮಾಡುವುದು ಅಕ್ರಮ ಹೇಗೆ ಆಗುತ್ತದೆ, ಅಲ್ಲಿ ಯಾವ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂಬುದನ್ನು ತಿಳಿಸಲು ಅರ್ಜಿದಾರರಿಗೆ ನಿರ್ದೇಶನ ನೀಡಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು. `ಮೆಟ್ರೊ ಯೋಜನೆಯ ರೂಪುರೇಷೆಗಳಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಕಾನೂನು ಉಲ್ಲಂಘನೆ ಆಗಿದ್ದರೆ ಮಾತ್ರ ನಾವು ಮಧ್ಯಪ್ರವೇಶ ಮಾಡುತ್ತೇವೆ' ಎಂದು ಪೀಠ ಮೌಖಿಕವಾಗಿ ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.