ADVERTISEMENT

ಸಿದ್ದಯ್ಯ ವಿರುದ್ಧ ತನಿಖೆಗೆ ಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2012, 19:40 IST
Last Updated 13 ಡಿಸೆಂಬರ್ 2012, 19:40 IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಹಿಂದಿನ ಆಯುಕ್ತ ಸಿದ್ದಯ್ಯ ಅವರ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಆರಂಭಿಸಿದ್ದ ತನಿಖೆಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಬಿಬಿಎಂಪಿ ಆಯುಕ್ತರಾಗಿದ್ದ ಅವಧಿಯಲ್ಲಿ, ಬೇಗೂರು - ಹುಳಿಮಾವು ಮಾರ್ಗದಲ್ಲಿ ಡಿಎಲ್‌ಎಫ್ ಕಂಪೆನಿಗೆ ಬಹುಮಹಡಿ ಅಪಾರ್ಟ್‌ಮೆಂಟ್ ನಿರ್ಮಿಸಲು ಕಾನೂನು ಮೀರಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ಇದನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಕೇಶವ ನಾರಾಯಣ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಇನ್ನೊಬ್ಬ ಆರೋಪಿಯಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ ವಿರುದ್ಧ ಬಿಎಂಟಿಎಫ್ ಆರಂಭಿಸಿದ್ದ ತನಿಖೆಗೆ ಈಗಾಗಲೇ ತಡೆಯಾಜ್ಞೆ ದೊರೆತಿದೆ.

ಪುರವಂಕರಕ್ಕೆ ನಿರಾಳ: ಪುರವಂಕರ ನಿರ್ಮಾಣ ಸಂಸ್ಥೆ ಬೆನ್ನಿಗಾನಹಳ್ಳಿಯಲ್ಲಿ ಕಟ್ಟಡ ನಿರ್ಮಿಸುವುದಕ್ಕೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದೆ.

ಬೆಂಗಳೂರು ಪೂರ್ವ ತಾಲ್ಲೂಕಿನ ಬೆನ್ನಿಗಾನಹಳ್ಳಿಯಲ್ಲಿ 4.20 ಎಕರೆ ಪ್ರದೇಶವನ್ನು ಎನ್‌ಜಿಇಎಫ್ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿತ್ತು. ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು, ನಂತರದ ದಿನಗಳಲ್ಲಿ ಇದೇ ಭೂಮಿಯನ್ನು ಮೂಲ ಮಾಲೀಕರಿಂದ ಖರೀದಿಸಿದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಜಮೀನನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕಾನೂನು ಬಾಹಿರವಾಗಿ ಕೈಬಿಟ್ಟಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಯಿತು. ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ, ಈ ಜಮೀನಿನಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ತಡೆಯಾಜ್ಞೆ ನೀಡಿತ್ತು.

ಇದನ್ನು ಪ್ರಶ್ನಿಸಿ ಪುರವಂಕರ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಕೇಶವ ನಾರಾಯಣ ನೇತೃತ್ವದ ಏಕಸದಸ್ಯ ಪೀಠ, ಲೋಕಾಯುಕ್ತ ನ್ಯಾಯಾಲಯದ ತಡೆಯಾಜ್ಞೆಯನ್ನು ತೆರವು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.