ಬೆಂಗಳೂರು: `ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಖಾಸಗಿ ಕಂಪೆನಿಗಳು ಸ್ಥಳೀಯರಿಗೆ ಶೇ 50ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಬೇಕು~ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದರು.
ನಗರದಲ್ಲಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯು ಆಯೋಜಿಸಿದ್ದ ಸ್ವಾಭಿಮಾನಿ ಕನ್ನಡಿಗರ ಸಮಾವೇಶ ಮತ್ತು ಕೆಂಪೇಗೌಡರ 502ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
`ರಾಜ್ಯದಲ್ಲಿ ಕನ್ನಡಿಗರಿಗೆ ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ. ಬೇರೆಡೆಯಿಂದ ಬಂದ ಪರಕೀಯರಿಗೆ ರಾಜ್ಯದಲ್ಲಿ ಮಣೆ ಹಾಕಲಾಗುತ್ತಿದೆ. ರಾಜ್ಯದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರಾಗಿದ್ದಾರೆ. ಇಲ್ಲಿ ಸ್ಥಾಪನೆಯಾಗುವ ಕೈಗಾರಿಕೆಗಳಲ್ಲೂ ಸ್ಥಳೀಯರಿಗೆ ಸೂಕ್ತ ಉದ್ಯೋಗಗಳು ಸಿಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಸ್ಥಾಪನೆಯಾಗುವ ಖಾಸಗಿ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ 50ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಬೇಕು~ ಎಂದರು.
`ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 371ನೇ ಕಲಂಗೆ ತಿದ್ದುಪಡಿ ತರಲು ಮುಂದಾಗಿದೆ. ರೈಲ್ವೆ ಇಲಾಖೆಯಲ್ಲಿ ಕನ್ನಡದಲ್ಲೇ ಪರೀಕ್ಷೆಗಳನ್ನು ಬರೆಯಲು ಅನುಕೂಲ ಮಾಡಿಕೊಡಲಾಗಿದೆ. ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಿದೆ~ ಎಂದು ಅವರು ತಿಳಿಸಿದರು.
`ದಕ್ಷಿಣ ಕರ್ನಾಟಕದ 72 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ತೀವ್ರ ತೊಂದರೆ ಇದೆ. ಹೀಗಾಗಿ ರಾಜ್ಯದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಈಗಾಗಲೇ ಆರಂಭವಾಗಿರುವ ನೀರಾವರಿ ಯೋಜನೆಗಳನ್ನು ಶೀಘ್ರವೇ ಮುಗಿಸಬೇಕು. ಪಶ್ಚಿಮ ಘಟ್ಟ ಭಾಗದಿಂದ ಸುಮಾರು ಎರಡು ಸಾವಿರ ಟಿಎಂಸಿ ನೀರು ಸಮುದ್ರ ಸೇರುತ್ತಿದೆ. ಇದನ್ನು ಸಮರ್ಪಕವಾಗಿ ಬಳಸುವ ಬಗ್ಗೆ ರಾಜ್ಯ ಸರ್ಕಾರ ಯೋಜನೆ ರೂಪಿಸಬೇಕು. ಪರಮೇಶ್ವರಯ್ಯ ವರದಿಯ ಶಿಫಾರಸಿನಂತೆ ರಾಜ್ಯದಲ್ಲಿ ವೈಜ್ಞಾನಿಕವಾಗಿ ನೀರಿನ ಹಂಚಿಕೆಯಾಗಬೇಕು~ ಎಂದು ಅವರು ಒತ್ತಾಯಿಸಿದರು.
`ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ರಾಜ್ಯ ಹಾಗೂ ದೆಹಲಿಯಲ್ಲಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅವರ ಮೇಲೆ ದಾಖಲಿಸಲಾಗಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ರಾಜ್ಯ ಸರ್ಕಾರ ಹಾಗೂ ದೆಹಲಿ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು~ ಎಂದು ಅವರು ಭರವಸೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, `ರಾಜ್ಯದಲ್ಲಿ ಕುಂಟುತ್ತಾ ಸಾಗಿರುವ ನೀರಾವರಿ ಯೋಜನೆಗಳನ್ನು ಕಳಸಾ-ಬಂಡೂರಿ ನೀರಾವರಿ ಯೋಜನೆಯನ್ನು ವಿಸ್ತರಿಸಿ ಹೆಚ್ಚಿನ ಜಿಲ್ಲೆಗಳಿಗೆ ನೀರಾವರಿ ಸೌಲಭ್ಯ ಒದಗಿಸಬೇಕು. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರುವ ಮೂಲಕ ಖಾಸಗಿ ಕಂಪೆನಿಗಳಲ್ಲಿ ಸ್ಥಳೀಯರಿಗೆ ಶೇ 85ರಷ್ಟು ಮೀಸಲಾತಿ ಕಲ್ಪಿಸಬೇಕು~ ಎಂದು ಒತ್ತಾಯಿಸಿದರು.
ಚಿತ್ರದುರ್ಗದ ಮಾದಾರ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, `ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆ ಕೆಟ್ಟಿದ್ದು, ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿದೆ. ಹೀಗಾಗಿ ಕರ್ನಾಟಕ ರಕ್ಷಣಾ ವೇದಿಕೆಯು ಹೋರಾಟದ ಜತೆಗೆ ರಾಜಕೀಯ ಕ್ಷೇತ್ರಕ್ಕೂ ಕಾಲಿಡಬೇಕು~ ಎಂದರು.
ಸಮಾರಂಭದಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಸುಬ್ರಹ್ಮಣ್ಯ ಸ್ವಾಮೀಜಿ, ಗೋಸಾಯಿ ಮಠದ ಸುರೇಶ್ವರಾನಂದ ಭಾರತಿ ಸ್ವಾಮೀಜಿ, ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ನಲ್ಲೂರು ಪ್ರಸಾದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿಸ್ಲೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.