ADVERTISEMENT

ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2013, 19:44 IST
Last Updated 25 ಸೆಪ್ಟೆಂಬರ್ 2013, 19:44 IST

ಬೆಂಗಳೂರು: ಸೇವಾ ಭದ್ರತೆ ಒದಗಿಸುವುದು, ಪ್ರತಿ ತಿಂಗಳ ಮೊದಲ ವಾರದಲ್ಲೇ ₨ 25,000 ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಒಕ್ಕೂಟ (ಡಿವೈಎಫ್‌ಐ) ಹಾಗೂ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಸದಸ್ಯರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಮೈಸೂರು ಬ್ಯಾಂಕ್‌ ವೃತ್ತದಿಂದ ಜಾಥಾ ಆರಂಭಿಸಿದ ಪ್ರತಿಭಟನಾಕಾರರು, ಕೆ.ಜಿ. ರಸ್ತೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ರವಿಕುಮಾರ್‌, ‘ವೇತನ ತಾರ ತಮ್ಯ, ನಿರಂತರ ಕಿರುಕುಳ, ಮೂಲ ಸೌಕರ್ಯದ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಪದವಿ ಕಾಲೇಜುಗಳಲ್ಲಿ ಏಳೆಂಟು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಸುಮಾರು 10 ಸಾವಿರ ಮಂದಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಇಲ್ಲದಂತಾಗಿದೆ. ಅವರ ಬೋಧನಾ ಸೇವೆಯನ್ನು ಸಂದರ್ಭಕ್ಕೆ ಅನುಸಾರವಾಗಿ ಬಳಸಿಕೊಳ್ಳುತ್ತಿರುವ ಸರ್ಕಾರ, ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನವನ್ನೂ ಮಾಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕಾಯಂ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ಸೇವಾ ಭದ್ರತೆ ಒದಗಿಸಿದರೆ ಅವರಿಂದ ಹೆಚ್ಚಿನ ಕೆಲಸಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು, ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಕೆಲಸ ಮಾಡಿಸಿ ಕೊಳ್ಳಲಾಗುತ್ತಿದೆ. ಸರ್ಕಾರ ಈ ಲೆಕ್ಕಚಾರಗಳನ್ನು ಬದಿಗಿಟ್ಟು ಯಾವುದೇ ತಾರತಮ್ಯ ಮಾಡದೆ ವೇತನ ಹೆಚ್ಚಳ ಮಾಡಬೇಕು. ಪ್ರಸ್ತುತ ದಿನಗಳಲ್ಲಿ ಅತಿಥಿ ಉಪನ್ಯಾಸಕರಿಗೆ ₨ 8,000ದಿಂದ 10,000 ವೇತನವನ್ನು ವರ್ಷದ ಕೊನೆಯಲ್ಲಿ ನೀಡಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇ ರಿರುವ ಪ್ರಸ್ತುತ  ಸಂದರ್ಭದಲ್ಲಿ ಈ ವೇತನ ದಿಂದ ಜೀವನ ನಡೆಸುವುದು ಸಾಧ್ಯವಿಲ್ಲ’ ಎಂದರು.

ನಂತರ ಮಾತನಾಡಿದ ಡಿವೈಎಫ್‌ಐನ ಸಂಚಾಲಕ ಎಸ್‌.ಪ್ರಸಾದ್‌, ‘ವಿಶ್ವವಿದ್ಯಾಲಯಗಳ ಅನುದಾನ ಆಯೋಗದ ನಿಯಮಗಳ ಪ್ರಕಾರ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ 50 ಗಂಟೆ ಕೆಲಸ ನೀಡಿ, ಗಂಟೆಗೆ ₨ 500ರಂತೆ ತಿಂಗಳಿಗೆ ₨25,000 ವೇತನ ನೀಡಬೇಕು. ಆದರೆ, ಆ ನಿಯಮ ಪಾಲನೆಯಾಗುತ್ತಿಲ್ಲ. ಇದನ್ನು ಖಂಡಿಸಿ ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನಿಗದಿತ ಸಮಯಕ್ಕೆ ಬೇಡಿಕೆಗಳು ಈಡೇರದಿದ್ದರೆ   ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರತೆ ಪಡೆಯಲಿದೆ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.