ADVERTISEMENT

ಸೌರ ವಿದ್ಯುತ್ ಘಟಕ; ಶೀಘ್ರವೇ ಕಾರ್ಯಾರಂಭ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 19:30 IST
Last Updated 19 ಸೆಪ್ಟೆಂಬರ್ 2011, 19:30 IST

ಬೆಂಗಳೂರು: `ದೇಶದಲ್ಲಿ 2020ರ ವೇಳೆಗೆ ಮೂರು ಗಿಗಾವಾಟ್ ಸಾಮರ್ಥ್ಯದ ಸೌರಶಕ್ತಿ ಘಟಕ ಅಸ್ತಿತ್ವಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಸೌರ ವಿದ್ಯುತ್ ಉತ್ಪಾದನೆಗೆ ರಿಯಾಯಿತಿ ಸೌಲಭ್ಯಗಳನ್ನು ಒದಗಿಸುತ್ತಿದೆ~ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವಾಲಯದ ನಿರ್ದೇಶಕ ಡಾ.ಬಿ.ಭಾರ್ಗವ ತಿಳಿಸಿದರು.

ಕರ್ನಾಟಕ ವಿದ್ಯುತ್ ನಿಗಮವು ಸಚಿವಾಲಯದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ `ಸೌರಶಕ್ತಿ ತಂತ್ರಜ್ಞಾನ ಕುರಿತ ರಾಷ್ಟ್ರೀಯ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಪ್ರಸ್ತುತ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 10 ಸಾವಿರ ಕೋಟಿ ವಹಿವಾಟು ನಡೆಯುತ್ತಿದೆ. ಅರುಣೋದಯ ಹಾಗೂ ಜೆಎನ್ ಸೌರಶಕ್ತಿ ಯೋಜನೆಯಡಿ ಪರ್ಯಾಯ ಇಂಧನಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಸೌರಶಕ್ತಿ ಕ್ಷೇತ್ರದಲ್ಲಿ ಅಗತ್ಯವಿರುವ ಎಲ್ಲಾ ಸಹಕಾರ ನೀಡಲು ಕೇಂದ್ರ ಸಿದ್ಧವಿದೆ~ ಎಂದರು.

`ಉಷ್ಣ ಹಾಗೂ ಜಲ ವಿದ್ಯುತ್ ಕ್ಷೇತ್ರದಿಂದ ಹೆಚ್ಚಿನ ವಿದ್ಯುತ್ ನಿರೀಕ್ಷಿಸುವುದು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ದೇಶದೆಲ್ಲೆಡೆ ರಾಷ್ಟ್ರೀಯ ವಿದ್ಯುತ್ ವ್ಯಾಪಾರ ನಿಗಮ (ಎನ್‌ವಿವಿಎನ್) ಸೌರಶಕ್ತಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ರಾಜಸ್ತಾನ ಹಾಗೂ ಗುಜರಾತ್‌ನಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಹೆಚ್ಚಿನ ಗಮನ ಹರಿಸಲಾಗಿದೆ. ಎನ್‌ವಿವಿಎನ್ ಎರಡನೇ ಹಂತದ ಯೋಜನೆಯಲ್ಲಿ ರಾಜ್ಯ ಸರ್ಕಾರ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದಕ್ಕೆ ಕೇಂದ್ರದಿಂದ ಎಲ್ಲ ನೆರವು ನೀಡಲಾಗುವುದು~ ಎಂದು ಹೇಳಿದರು.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಮೀಮ್ ಬಾನು, `ಸೌರಶಕ್ತಿ ಕ್ಷೇತ್ರದಲ್ಲಿ ಖಾಸಗಿ ಕಂಪೆನಿಗಳು ಭಾಗಿಯಾಗಲು ರಾಜ್ಯದಲ್ಲಿ ಅವಕಾಶ ಕಲ್ಪಿಸಲಾಗಿದೆ. ಶೀಘ್ರದಲ್ಲಿಯೇ 80 ಮೆಗಾವಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಕಾರ್ಯಾರಂಭ ಮಾಡಲಿದೆ. ಅದಕ್ಕೆ ಪೂರಕವಾಗಿ ಈ ತರಬೇತಿ ಕೇಂದ್ರವನ್ನು ಆರಂಭಿಸಲಾಗಿದೆ. ದೆಹಲಿ, ಮುಂಬೈ, ರಾಜಸ್ತಾನ ಮುಂತಾದ ಕಡೆಗಳಿಂದ ಆಗಮಿಸಿದ ಆಸಕ್ತರು ತರಬೇತಿ ಪಡೆಯುತ್ತಿದ್ದಾರೆ~ ಎಂದರು.

ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಯೋಗೇಂದ್ರ ತ್ರಿಪಾಠಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ. ರವಿಕುಮಾರ್, ಕೆಆರ್‌ಇಡಿಎಲ್ ವ್ಯವಸ್ಥಾಪಕ ನಿರ್ದೇಶಕ ಎನ್.ಎಸ್. ಪ್ರಸನ್ನ ಕುಮಾರ್ ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ನವೀನ್‌ಕುಮಾರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.