ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸಂಗೊಳ್ಳಿ ರಾಯಣ್ಣನ ಸ್ಮಾರಕಗಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸುವಂತೆ ಒತ್ತಾಯಿಸಿ ಕುರುಬರ ಸೇನೆ ಮತ್ತು ಅಖಿಲ ಕರ್ನಾಟಕ ಸಂಗೊಳ್ಳಿ ರಾಯಣ್ಣ ಸ್ಮಾರಕ ಅಭಿವೃದ್ಧಿ ಪ್ರಾಧಿಕಾರ ರಚನೆ ಹೋರಾಟ ಸಮಿತಿ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಬೆಳಗಾವಿ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಂಗೊಳ್ಳಿ ರಾಯಣ್ಣನ ಸ್ಮಾರಕಗಳ ಅಭಿವೃದ್ಧಿ ಕಾರ್ಯವನ್ನು ಸರ್ಕಾರ ನಿರ್ಲಕ್ಷಿಸಿದೆ. ಇದರಿಂದ ಸ್ಮಾರಕಗಳು ಶಿಥಿಲಗೊಂಡಿವೆ. ಸ್ಮಾರಕಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಅಹಿಂದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಮುಕುಡಪ್ಪ, `ಸಂಗೊಳ್ಳಿ ರಾಯಣ್ಣ, ರಾಣಿ ಚನ್ನಮ್ಮ ಅವರಂತಹ ಹಿಂದುಳಿದ ವರ್ಗಗಳ ಹಾಗೂ ದಲಿತ ಸಮುದಾಯದ ನಾಯಕರು ಇತಿಹಾಸವನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ಇತಿಹಾಸವನ್ನು ಬರೆದ ಮೇಲ್ವರ್ಗದ ಜನರು ಪೂರ್ವಾಗ್ರಹದಿಂದ ಆ ನಾಯಕರಿಗೆ ಅನ್ಯಾಯ ಮಾಡಿದ್ದಾರೆ. ಅಲ್ಲದೇ ಅಂತಹ ನಾಯಕರ ಸಾಧನೆ ಮತ್ತು ನೆನಪುಗಳನ್ನು ಉಳಿಸುವ ಕೆಲಸವನ್ನು ಸರ್ಕಾರಗಳು ಮಾಡಿಲ್ಲ~ ಎಂದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿರುವ ರಾಯಣ್ಣನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಣೆ ಮಾಡಬೇಕು.
ರಾಯಣ್ಣನ ಇತರೆ ಸ್ಮಾರಕಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ನೀಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅರವಿಂದ ಎಂ.ದಳವಾಯಿ, ಜೆಡಿಎಸ್ ಮುಖಂಡ ಸಿ.ನಾರಾಯಣಸ್ವಾಮಿ, ಕುರುಬರ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಈಶ್ವರಯ್ಯ ಮತ್ತಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.