ADVERTISEMENT

ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2012, 19:30 IST
Last Updated 18 ಅಕ್ಟೋಬರ್ 2012, 19:30 IST
ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ
ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ   

ಬೆಂಗಳೂರು: ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ಆನಂದರಾವ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ರಾಜ್ಯ ಘಟಕದ ಕಾರ್ಯದರ್ಶಿ ಕೆ.ರಮೇಶ್ ಮಾತನಾಡಿ, `ರಾಜ್ಯದ ಹಲವು ಭಾಗಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ಕೂಡಲೇ ವಿದ್ಯಾರ್ಥಿ ನಿಲಯಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ವಿದ್ಯಾರ್ಥಿಗಳು, ಮೇಲ್ವಿಚಾರಕರು, ಸಿಬ್ಬಂದಿ ವರ್ಗಗಳ ಹಾಜರಾತಿ ಹಾಗೂ ಗೈರು ಹಾಜರಾತಿ ತಿಳಿಯಲು ಬೆರಳಚ್ಚು ಯಂತ್ರವನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.

`ರಾಜ್ಯದಲ್ಲಿರುವ ಸುಮಾರು ಆರು ಲಕ್ಷ ಬಡ ಕುಟುಂಬಗಳ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕೂಡ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷಾ ಶುಲ್ಕ, ಭೋದನಾ ಶುಲ್ಕ, ಪ್ರಯೋಗಾಲಯ ಶುಲ್ಕವನ್ನು ವಿದ್ಯಾರ್ಥಿಗಳ ಪೋಷಕರೇ ಪಾವತಿ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಖಂಡನೀಯ. ಈ ನಡುವೆ ಕೆಲ ಶಿಕ್ಷಣ ಸಂಸ್ಥೆಗಳು ಹಿಂದುಳಿದ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದು ತಿಳಿದು ಬಂದಿದೆ. ಅಂತಹ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು~ ಎಂದು ಆಗ್ರಹಿಸಿದರು.

`ರಾಜ್ಯದ ಬಹುತೇಕ ಭಾಗಗಳು ಈಗಾಗಲೇ ಬರದಿಂದ ತತ್ತರಿಸಿ ಹೋಗಿವೆ. ಜತೆಗೆ ನಿರಂತರ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಶೈಕ್ಷಣಿಕ ಶುಲ್ಕವನ್ನು ಭರಿಸಲಾರದ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಸರ್ಕಾರವೇ ಮೊದಲಿನಂತೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕಗಳನ್ನು ಪಾವತಿ ಮಾಡಬೇಕು~ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.