ADVERTISEMENT

ಹೃದಯ ಕಾಯಿಲೆ: ಕೈದಿ ಸಾವು

​ಪ್ರಜಾವಾಣಿ ವಾರ್ತೆ
Published 12 ಜನವರಿ 2012, 19:40 IST
Last Updated 12 ಜನವರಿ 2012, 19:40 IST

ಬೆಂಗಳೂರು:  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೈದಿಯೊಬ್ಬನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳಗಾವಿಯ ಯಮಕನಮರಡಿ ಮೂಲದವರಾದ ಗುರುಲಿಂಗಪ್ಪ (35) ಎಂಬುವವರು ಮೃತಪಟ್ಟಿದ್ದು ಇವರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದುದರಿಂದ ಇವರನ್ನು ಬೆಳಗಾವಿ ಜೈಲಿನಿಂದ ನಗರದ ಪರಪ್ಪನ ಅಗ್ರಹಾರಕ್ಕೆ ವರ್ಗಾಯಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಬೆಳಿಗ್ಗೆ ದಿಢೀರನೇ ಕುಸಿದು ಬಿದ್ದರು. ಆಸ್ಪತ್ರೆಗೆ ಕೊಂಡೊಯ್ಯುವಾಗ ಸಾವನ್ನಪ್ಪಿದರು ಎಂದು ಎಸಿಪಿ ಎನ್.ರಮೇಶ್ ತಿಳಿಸಿದರು.

ಸವಾರ ಸಾವು: ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ನಿಲ್ದಾಣದ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ.

ನಾಯಂಡನಹಳ್ಳಿಯ ನಿವಾಸಿ ರೆಹಮತ್ ವುಲ್ಲಾ (40) ಮೃತಪಟ್ಟವರು. ಡಬಲ್‌ರೋಡ್ ಬಳಿ ಇರುವ ಹೊಟೇಲ್ ಒಂದರ ವ್ಯವಸ್ಥಾಪಕರಾಗಿದ್ದ ರೆಹಮತ್, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಲಾರಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ನಂತರ ರೆಹಮತ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದರು.

ನಂತರ ಮುಂದೆ ಚಲಿಸುತ್ತಿದ್ದ ಆಟೊಗೆ ಡಿಕ್ಕಿ ಹೊಡೆದ ಲಾರಿ, ಮತ್ತೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಆಟೊ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.