ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಬುಧವಾರ ನಡೆದ ದಿಢೀರ್ ಬೆಳವಣಿಗೆಯಲ್ಲಿ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂದು ತಮ್ಮನ್ನು ಭೇಟಿಯಾದ ಮುಖಂಡರಿಗೆ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಸಕ ಎಸ್.ಮುನಿರಾಜು ಹಾಗೂ ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುಬ್ಬು ನರಸಿಂಹ ಅವರು ಬುಧವಾರ ಕಟ್ಟಾ ಅವರ ಮನೆಗೆ ತೆರಳಿ ಹೆಬ್ಬಾಳ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಸಮಾಲೋಚನೆಯನ್ನು ನಡೆಸಿದರು.
‘ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನಮ್ಮ ಕುಟುಂಬದಿಂದಲೂ ಯಾರನ್ನೂ ಕಣಕ್ಕಿಳಿಸಲು ಬಯಸುವು ದಿಲ್ಲ’ ಎಂದು ಕಟ್ಟಾ ಅವರು ಸ್ಪಷ್ಟಪಡಿಸಿದರು ಎನ್ನಲಾಗಿದೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಸೂಚಿಸುವ ವ್ಯಕ್ತಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ನಾಯಕರು ಪ್ರಸ್ತಾಪಿಸಿದ್ದಾರೆ. ಆದರೆ ಅವರು ಅದಕ್ಕೂ ಆಸಕ್ತಿ ತೋರಿಸಿಲ್ಲ ಎಂದು ಮೂಲಗಳು ತಿಳಿಸಿವೆ.
‘ಕಳೆದ ಬಾರಿ ಪಕ್ಷವು ನಿಲ್ಲಿಸಿದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಈ ಬಾರಿಯೂ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ’ ಎಂದು ಅವರು ತಮ್ಮನ್ನು ಭೇಟಿಯಾದ ಮುಖಂಡರಿಗೆ ತಿಳಿಸಿದರು.
ತೀರ್ಥಯಾತ್ರೆಗೆ ಹೊರಟ ಕಟ್ಟಾ: ಚುನಾವಣೆ ಪ್ರಕ್ರಿಯೆ ಚುರುಕುಗೊಳ್ಳುವ ಸಂದರ್ಭದಲ್ಲೇ ಕಟ್ಟಾ ಅವರು ಮೂರು ದಿನಗಳ ಕಾಲ ತೀರ್ಥಯಾತ್ರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.