ADVERTISEMENT

ಹೇಮಾಮಾಲಿನಿ ರಾಜ್ಯಸಭೆಗೆ : ಬಿಜೆಪಿ ನಿಲುವು ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2011, 19:00 IST
Last Updated 20 ಫೆಬ್ರುವರಿ 2011, 19:00 IST

ಬೆಂಗಳೂರು: ನಟಿ ಹೇಮಾಮಾಲಿನಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಕಳುಹಿಸಲು ನಿರ್ಧರಿಸಿರುವ ಬಿಜೆಪಿ ಮುಖಂಡರ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು (ಟಿ.ಎ.ನಾರಾಯಣಗೌಡ ಬಣ) ನಗರದ ಎಚ್‌ಎಎಲ್ ವಿಮಾನ ನಿಲ್ದಾಣದ ಸಮೀಪ ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಾಡಲು ಯತ್ನಿಸಿದರು.

ಆಗ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದರಿಂದ ಪರಸ್ಪರರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ನಂತರ ಪೊಲೀಸರು ಪ್ರತಿಭಟನಾಕಾರರಲ್ಲಿ 26ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪರಿಸ್ಥಿತಿ ನಿಯಂತ್ರಿಸಿದರು.

ಕನ್ನಡಿಗರ ಮತಗಳಿಂದ ಆಯ್ಕೆಯಾಗಿರುವ ರಾಜ್ಯದ ಶಾಸಕರು ಅನ್ಯ ರಾಜ್ಯದವರಾದ ಹೇಮಾಮಾಲಿನಿ ಅವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ಮುಖಂಡರು ಕನ್ನಡಿಗರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಕನ್ನಡೇತರ ವ್ಯಕ್ತಿಗಳಿಗೆ ರಾಜ್ಯದ ಸಮಸ್ಯೆಗಳ ಬಗ್ಗೆ ಅರಿವು ಇರುವುದಿಲ್ಲ. ಅಂತಹವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸುವುದರಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗುವುದಿಲ್ಲ. ರಾಜ್ಯ ಬಿಜೆಪಿ ನಾಯಕರು ರಾಷ್ಟ್ರೀಯ ಮುಖಂಡರ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಹೇಮಾಮಾಲಿನಿ ಅವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸುವ ನಿರ್ಧಾರದಿಂದ ಬಿಜೆಪಿ ನಾಯಕರು ಹಿಂದೆ ಸರಿಯಬೇಕು. ಇಲ್ಲದಿದ್ದರೆ ರಾಜ್ಯದೆಲ್ಲೆಡೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದುಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.