ADVERTISEMENT

ಹೈ-ಕ ವಿಶೇಷ ಸ್ಥಾನಮಾನಕ್ಕೆ ಧರಣಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2012, 19:30 IST
Last Updated 24 ಜನವರಿ 2012, 19:30 IST

ಬೆಂಗಳೂರು: ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ರಾಜಭವನದ ಪ್ರವೇಶ ದ್ವಾರದ ಮುಂದೆ ಧರಣಿ ನಡೆಸಿದರು.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ `ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರ ಸಚಿವರು ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ. ಆದ್ದರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ನಾವೇ ಫೆಬ್ರುವರಿ ಎರಡನೇ ವಾರ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇವೆ~ ಎಂದರು.

ಕರ್ನಾಟಕ ಏಕೀಕರಣ ಆದಾಗಿನಿಂದ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಂಡಿಲ್ಲ. ಹೈದರಾಬಾದ್ ಕರ್ನಾಟಕ ಪ್ರದೇಶದ ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ಶಿಕ್ಷಣ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳು ಸಿಗದೆ ಜನರ ಜೀವನವೂ ಕತ್ತಲಾಗಿದೆ.  ಈ ಎಲ್ಲಾ ಅಂಶಗಳನ್ನು ಮನಗಂಡು ಸರ್ಕಾರ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು. ಮುಂದಿನ ಬಜೆಟ್‌ನಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಆಯವ್ಯಯ ಮಂಡಿಸಬೇಕು ಹಾಗೂ ಈ ಭಾಗದ ಅಭಿವೃದ್ಧಿಗೆ ಮಾಡಿರುವ ವೆಚ್ಚದ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕು~ ಇಲ್ಲದಿದ್ದರೆ ತೀವ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆಗೊಳಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಶಿವರಾಮೇಗೌಡ, ಕಾರ್ಯಾಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ, ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎನ್.ಮೂರ್ತಿ ಸೇರಿದಂತೆ ವಿವಿಧ ಸಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.