ದೊಡ್ಡಬಳ್ಳಾಪುರ: ಆಂಧ್ರಪ್ರದೇಶ ಮಾದರಿಯಲ್ಲಿ ರಾಜ್ಯದಲ್ಲೂ ಒಳಮೀಸಲಾತಿ ನೀಡಬೇಕು. ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಬೇಕು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯಿಲಿ ಹೇಳಿದರು.
ಅವರು ನಗರಸಭೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನ್ರಾಮ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ರಾಜಕಾರಣದಲ್ಲಿ ಕೋಮುವಾದಿಗಳ ಗಾಳಿ ಬೀಸುತ್ತಿದೆ. ಇದನ್ನು ತಡೆಯುವ ಕೆಲಸ ಎಲ್ಲ ಹಿಂದುಳಿದ ಜನರಿಂದ ಆಗಬೇಕಿದೆ ಎಂದರು.
ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಮಾತನಾಡಿ, ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅರ್ಧಕ್ಕೆ ನಿಂತಿರುವ ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ ಅಗತ್ಯ ಆರ್ಥಿಕ ನೆರವು ನೀಡಲಾಗುವುದು’ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ‘ಪ್ರತಿ ಹೋಬಳಿಗೆ ಒಂದು ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಹಣ ನೀಡಲು ಸಮಾಜ ಕಲ್ಯಾಣ ಇಲಾಖೆ ಸಚಿವರು ಒಪ್ಪಿಗೆ ನೀಡಿದ್ದಾರೆ’ ಎಂದರು.
ಶಾಸಕ ಪಿಳ್ಳಮುನಿಶಾಮಪ್ಪ, ವಿಧಾನ ಪರಿಷತ್ ಸದಸ್ಯ ಧರ್ಮಸೇನ್, ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ, ಆರ್.ಜಿ.ವೆಂಕಟಾಚಲಯ್ಯ, ಜಿ.ಪಂ.ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸಂಚಾಲಕ ಡಾ.ಎಂ.ಪರಮೇಶ್, ನಗರ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ತಿ.ರಂಗರಾಜು, ಕಾರ್ಯದರ್ಶಿ ಡಿ.ವಿ.ಅಶ್ವತ್ಥಪ್ಪ, ಜಿ.ಲಕ್ಷ್ಮೀಪತಿ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.