
ಚಿತ್ರಸಂತೆ
ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು ಇದೇ ಭಾನುವಾರ (ಜ.4) ಕುಮಾರಕೃಪಾ ರಸ್ತೆಯಲ್ಲಿ 23ನೇ ‘ಚಿತ್ರಸಂತೆ’ಯನ್ನು ಹಮ್ಮಿಕೊಂಡಿದ್ದು, ಈ ಸಂತೆಯು ಸಾವಿರಾರು ಕಲಾವಿದರ ಪ್ರತಿಭೆ ಅನಾವರಣಕ್ಕೆ ಹಾಗೂ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೆ ವೇದಿಕೆ ಕಲ್ಪಿಸಲಿದೆ.
ಈ ಬಾರಿಯ ಚಿತ್ರಸಂತೆಯನ್ನು ‘ಪರಿಸರ’ಕ್ಕೆ ಸಮರ್ಪಣೆ ಮಾಡಲಾಗಿದೆ. ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಸಂತೆಗೆ ಪರಿಷತ್ತು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಉದ್ಘಾಟನಾ ಕಾರ್ಯಕ್ರಮದ ವೇದಿಕೆ ಹಾಗೂ ವಿವಿಧ ಕಲಾಕೃತಿಗಳಿಗೆ ಕಲಾವಿದರು ಶನಿವಾರ ಅಂತಿಮ ಸ್ಪರ್ಶ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಬೆಳಿಗ್ಗೆ 10.30ಕ್ಕೆ ಪರಿಷತ್ತಿನ ಆವರಣದಲ್ಲಿ ಚಿತ್ರಸಂತೆ ಉದ್ಘಾಟಿಸುತ್ತಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಕಲಾ ಪ್ರದರ್ಶನ’ಕ್ಕೆ ಚಾಲನೆ ನೀಡುತ್ತಾರೆ.
ದೇಶದ ವಿವಿಧ ಭಾಗಗಳಿಂದ 1,500 ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿ, ಕಲಾಕೃತಿಗಳನ್ನು ಪ್ರದರ್ಶಿಸಲಿದ್ದಾರೆ. ಕರ್ನಾಟಕದ ಜತೆಗೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ. ಪರಿಷತ್ತಿನ ಗ್ಯಾಲರಿಗಳಲ್ಲಿ ಹಿರಿಯ ಹಾಗೂ ಹೆಸರಾಂತ ಕಲಾವಿದರು ರಚಿಸಿದ ಕಲಾಕೃತಿಗಳ ಪ್ರದರ್ಶನ ನಡೆಯಲಿವೆ.
ಚಿತ್ರಸಂತೆಯಲ್ಲಿ ವ್ಯಂಗ್ಯಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಕುಂಚ ಅಥವಾ ಪೆನ್ಸಿಲ್‌ಗಳಿಂದ ಕಲಾರಸಿಕರ ಭಾವಚಿತ್ರಗಳನ್ನು ಸ್ಥಳದಲ್ಲಿಯೇ ರಚಿಸಿಕೊಡುವ ಕಲಾವಿದರು ಇರುತ್ತಾರೆ.
‘ಹಿರಿಯ ಕಲಾವಿದರು ಹಾಗೂ ಅಂಗವಿಕಲರಿಗೆ ಆಯ್ದ ಸ್ಥಳದಲ್ಲಿ ಅಗತ್ಯ ಸೌಲಭ್ಯ ಒದಗಿಸಿಕೊಡಲಾಗುತ್ತಿದೆ. ಪರಿಷತ್ತಿನ ಆವರಣದ ಹೊರಗೆ ಸಂಚಾರಿ ಎಟಿಎಂ ಇರಲಿವೆ. ಈ ಚಿತ್ರಸಂತೆಯಲ್ಲಿ ₹100 ರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಲಾಕೃತಿಗಳು ಲಭ್ಯ. ಈ ಬಾರಿಯ ಚಿತ್ರಸಂತೆಗೆ ಐದು ಲಕ್ಷ ಮಂದಿ ಭೇಟಿ ನೀಡುವ ನಿರೀಕ್ಷೆಯಿದೆ’ ಎಂದು ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ತಿಳಿಸಿದರು.
ಮನೆಗೊಂದು ಕಲಾಕೃತಿ ಚಿತ್ರಸಂತೆಯ ಧ್ಯೇಯವಾಗಿದ್ದು ಕಲೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶ ಹೊಂದಿದೆ. ಕಲಾವಿದರಿಂದ ನೇರವಾಗಿ ಕಲಾಕೃತಿಗಳನ್ನು ಖರೀದಿಸಬಹುದುಬಿ.ಎಲ್.ಶಂಕರ್ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.