ADVERTISEMENT

4 ತಾಲ್ಲೂಕುಗಳಲ್ಲಿ ಪ್ರಾಯೋಗಿಕ ಅಂಗನವಾಡಿ

ರಾಜ್ಯದಲ್ಲಿ 60 ಸಾವಿರ ಅಪೌಷ್ಟಿಕ ಮಕ್ಕಳು

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2012, 19:40 IST
Last Updated 13 ಡಿಸೆಂಬರ್ 2012, 19:40 IST

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ಉದ್ದೇಶದಿಂದ ನಾಲ್ಕು ತಾಲ್ಲೂಕುಗಳಲ್ಲಿ ಪ್ರಾಯೋಗಿಕವಾಗಿ ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ.

ಮಕ್ಕಳು ಅಪೌಷ್ಟಿಕತೆಯಿಂದ ಬಳಲುವುದನ್ನು ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಬಿ.ಎಲ್. ಪಾಟೀಲ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಡೆಸಿತು.

ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೆ.ಎಂ. ನಟರಾಜ್, `ಪ್ರತಿ ಅಂಗನವಾಡಿಗೆ 10 ಲಕ್ಷ ರೂಪಾಯಿ ವಿನಿಯೋಗಿಸಲಾಗುತ್ತದೆ. ಬೀದರ್, ದೇವದುರ್ಗ, ರಾಯಚೂರು ಹಾಗೂ ಮೈಸೂರು ತಾಲ್ಲೂಕುಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದೆ. ಇದರ ಹೊರತಾಗಿ, ದೇವದುರ್ಗ ತಾಲ್ಲೂಕಿಗೆ 10 ಕೋಟಿ ರೂಪಾಯಿ ಮೊತ್ತದ ವಿಶೇಷ ಯೋಜನೆ ರೂಪಿಸಲಾಗಿದೆ' ಎಂದರು.

ಕಾಲಕಾಲಕ್ಕೆ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವ ಕಾರಣ, ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 72 ಸಾವಿರದಿಂದ 60 ಸಾವಿರಕ್ಕೆ ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಇಂಥ ಮಕ್ಕಳ ಸಂಖ್ಯೆ 2 ಸಾವಿರ ಎಂದು ವಿವರಿಸಿದರು.

18 ಲಕ್ಷ ಪಡಿತರ ಚೀಟಿ ರದ್ದು: ರಾಜ್ಯದಲ್ಲಿ ಒಟ್ಟು 18 ಲಕ್ಷ ಅಕ್ರಮ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಗುರುವಾರ ತಿಳಿಸಿದೆ. ಅಲ್ಲದೆ, ಹೊಸದಾಗಿ ನೀಡುವ, ರದ್ದು ಮಾಡುವ ಪಡಿತರ ಚೀಟಿಗಳ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಲಾಗುತ್ತದೆ ಎಂದೂ ತಿಳಿಸಿದೆ.

ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ಅವರು 2006ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠಕ್ಕೆ ಸರ್ಕಾರ ಈ ವಿಷಯ ತಿಳಿಸಿತು.

`ರಾಮದಾಸ್ ಅವರು ಈಗ ಸಚಿವ ಸ್ಥಾನ ಹೊಂದಿದ್ದಾರೆ. ಪಡಿತರ ಚೀಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಕ್ರಮ ತೆಗೆದುಕೊಳ್ಳುವ ಅಧಿಕಾರ ಅವರಿಗೆ ಇದೆ. ಅವರೇ, ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದು ಸರಿಯಲ್ಲ' ಎಂದು ಕೆ.ಎಂ. ನಟರಾಜ್ ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.