ADVERTISEMENT

ಕೃಷಿ ವಿಶ್ವವಿದ್ಯಾಲಯಗಳಲ್ಲಿ ಶೇ 45 ರಷ್ಟು ಬೋಧಕ ಹುದ್ದೆಗಳು ಖಾಲಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 11:04 IST
Last Updated 30 ಜೂನ್ 2021, 11:04 IST

ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಶೇ 45 ರಷ್ಟು ಬೋಧಕ ಹುದ್ದೆಗಳು ಮತ್ತು ಶೇ 55 ರಷ್ಟು ಬೋಧಕೇತರ ಹುದ್ದೆಗಳ ಕೊರತೆ ಇದ್ದು, ಅವುಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಅಲ್ಲದೆ, ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಮತ್ತು ಸಂಶೋಧನೆಗೆ 2016–17 ರಿಂದ ಈಚೆಗೆ ಶೇ 65 ರಷ್ಟು ಅನುದಾನ ಕಡಿತಗೊಂಡಿದೆ ಎಂದೂ ಅವರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು. ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ನೇತೃತ್ವದಲ್ಲಿ ಕುಲಪತಿಗಳು ತೆರಳಿದ್ದರು.

ಗುಣಮಟ್ಟದ ಹಾಗೂ ಪರಿಣಾಮಕಾರಿ ಶಿಕ್ಷಣಕ್ಕೆ ಮಾನವ ಸಂಪನ್ಮೂಲಗಳ ಅಗತ್ಯತೆ ಇದೆ. ಆದರೆ, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿ ಇರುವುದರಿಂದ ಈಗಿರುವ ಸಿಬ್ಬಂದಿಗಳೇ ಹೇಗೋ ಸರಿದೂಗಿಸಿಕೊಂಡು ಹೆಚ್ಚುವರಿ ಜವಾಬ್ದಾರಿಯಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಾನವ ಸಂಪನ್ಮೂಲ ಕೊರತೆಯಿಂದಾಗಿ ಕೆಲವೆಡೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ADVERTISEMENT

ಮಾನವ ಸಂಪನ್ಮೂಲ ಕೊರತೆ ವಿದ್ಯಾರ್ಥಿಗಳ ಕಲಿಕೆಯ ಮೇಲೂ ಪರಿಣಾಮ ಬೀರುತ್ತಿದ್ದು, ಅಲ್ಲದೇ ಹೆಚ್ಚುವರಿ ಜವಾಬ್ದಾರಿಯಿಂದಾಗಿ ಸಿಬ್ಬಂದಿ ಮೇಲೂ ಸಹ ಪರಿಣಾಮವುಂಟಾಗುತ್ತಿದೆ ಎಂದು ಕೃಷಿ ಸಚಿವರ ಭೇಟಿ ವೇಳೆ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿಕೊಟ್ಟು ಮಾನವ ಸಂಪನ್ಮೂಲ ಹೆಚ್ಚಳಕ್ಕೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.