ADVERTISEMENT

ಇಂದಿನಿಂದ ಬಜೆಟ್‌ ಪೂರ್ವಸಭೆ ಆರಂಭ

​ಪ್ರಜಾವಾಣಿ ವಾರ್ತೆ
Published 17 ಜನವರಿ 2018, 19:30 IST
Last Updated 17 ಜನವರಿ 2018, 19:30 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಕೊನೆಯ ಆಯವ್ಯಯವನ್ನು ಫೆಬ್ರುವರಿಯಲ್ಲಿ ಮಂಡಿಸಲಿದ್ದು, ಇದಕ್ಕಾಗಿ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜತೆ ಗುರುವಾರದಿಂದ ಪೂರ್ವ ಸಿದ್ಧತಾ ಸಭೆಗಳನ್ನು ಆರಂಭಿಸಲಿದ್ದಾರೆ.

ನಾಳೆ ಸಂಜೆ ವಿವಿಧ ರೈತ ಸಂಘಟನೆಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸುವ ಮೂಲಕ ಸಿದ್ಧತಾ ಸಭೆಗೆ ಚಾಲನೆ ನೀಡಲಿದ್ದಾರೆ.

13 ನೇ ಬಜೆಟ್‌ ಮಂಡನೆಗೆ ಸಿದ್ಧತೆ ನಡೆಸಿರುವ ಅವರು ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು  ಜನಪ್ರಿಯ ಆಯವ್ಯಯ ಮಂಡಿಸಲಿದ್ದಾರೆ. ಈ ಬಾರಿ ರೈತರು, ರಾಜ್ಯ ಸರ್ಕಾರಿ ನೌಕರರು, ಅಲ್ಪಸಂಖ್ಯಾತ, ಹಿಂದುಳಿದವರು, ದಲಿತರು ಮತ್ತು ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆ. ಇದಕ್ಕಾಗಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಇದೇ 19 ರಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಅರಣ್ಯ, ಇಂಧನ, ಆಹಾರ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ. ಇದೇ ರೀತಿಯಲ್ಲಿ ಪ್ರತಿ ದಿನ ಆರರಿಂದ ಏಳು ಇಲಾಖೆಗಳ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುವರು. ಫೆಬ್ರುವರಿ 3 ರಂದು ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ವರ್ಗಕ್ಕೆ ಸೇರಿದ ಶಾಸಕರು ಮತ್ತು ಸಂಸದರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಆಯವ್ಯಯದಲ್ಲಿ ಯಾವ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಸರ್ಕಾರದ ಜನಪ್ರಿಯತೆ ಹೆಚ್ಚುತ್ತದೆ ಎಂಬುದರ ಬಗ್ಗೆ ಚರ್ಚೆ ನಡೆಸಿ ಅದಕ್ಕೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.