ADVERTISEMENT

ರಾಹುಲ್‌ ಪ್ರವಾಸ: ಕಾಂಗ್ರೆಸ್‌ ಸಭೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2018, 19:30 IST
Last Updated 22 ಜನವರಿ 2018, 19:30 IST

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಫೆ. 10ರಿಂದ ಮೂರು ದಿನ ಕಲಬುರ್ಗಿ ವಿಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪೂರ್ವಸಿದ್ಧತೆ
ಗಾಗಿ ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಪ್ರಮುಖರ ಜೊತೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಚರ್ಚೆ ನಡೆಸಲಿದ್ದಾರೆ.

ನಗರದಲ್ಲಿ ಎರಡು ದಿನ ವಾಸ್ತವ್ಯ ಹೂಡಲಿರುವ ಅವರು, ಕಲಬುರ್ಗಿ ವಿಭಾಗದ ಸಚಿವರು, ಶಾಸಕರು, ಸಂಸದರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ಟಿಕೆಟ್‌ ಆಕಾಂಕ್ಷಿಗಳ ಜೊತೆಯೂ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಂದ್‌ಗೆ ಬೆಂಬಲ: ‘ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಿ ಬಗೆಹರಿಸಬೇಕು ಎಂದು ಆಗ್ರಹಿಸಿ ರೈತಪರ ಮತ್ತು ಕನ್ನಡಪರ ವಿವಿಧ ಸಂಘಟನೆಗಳು ಇದೇ 25ರಂದು ಬಂದ್‌ ಕರೆ ನೀಡಿವೆ. ಅದಕ್ಕೆ ಎಲ್ಲರೂ ಬೆಂಬಲ ನೀಡಬೇಕಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ADVERTISEMENT

‘ಬಂದ್‌ಗೆ ನಮ್ಮ ಪಕ್ಷ ಬೆಂಬಲ ವ್ಯಕ್ತಪಡಿಸಿದೆ. 26ರಂದು ಗಣರಾಜ್ಯೋತ್ಸವ. ಹೀಗಾಗಿ 25ಕ್ಕೆ ಬಂದ್‌ ಮಾಡಿ ಎಂದು ಮುಖ್ಯಮಂತ್ರಿ ಹೇಳಿದ್ದರು. ಮೋದಿ, ಅಮಿತ್ ಷಾ ಬರುತ್ತಾರೆ ಎಂದು ನಮಗೇನು ಗೊತ್ತು’ ಎಂದು ಪ್ರಶ್ನಿಸಿದರು.

‘ಮಹದಾಯಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಕನ್ನಡಪರ ಸಂಘಟನೆಗಳ ಹೋರಾಟದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.