ADVERTISEMENT

ಕಸದಿಂದ ವಿದ್ಯುತ್‌ ತಯಾರಿಸಬಾರದೇಕೆ...

ಬಿಬಿಎಂಪಿಗೆ ಹೈಕೋರ್ಟ್‌ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2018, 19:50 IST
Last Updated 29 ಜನವರಿ 2018, 19:50 IST

ಬೆಂಗಳೂರು: ‘ನಾರ್ವೆಯಂತಹ ಯುರೋಪಿಯನ್‌ ದೇಶ ಕಸದಿಂದ ವಿದ್ಯುತ್‌ ತಯಾರಿಸುತ್ತಿರುವ ಕ್ರಮವನ್ನು ಬೆಂಗಳೂರು ಮಹಾನಗರ ಪಾಲಿಕೆಯೂ ಏಕೆ ಅನುಸರಿಸಬಾರದು’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಹೈಕೋರ್ಟ್‌ ಪ್ರಶ್ನಿಸಿದೆ.

ರಾಜಕಾಲುವೆಗಳ ಉಸ್ತುವಾರಿ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಈ ಕುರಿತಂತೆ ಬಿಬಿಎಂಪಿ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಮೂರ್ತಿಗಳು, ‘ಇದೊಂದು ಬೆಟ್ಟದಂತಹ ಸಮಸ್ಯೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ರಾಜಕಾಲುವೆಗಳ ನಿರ್ವಹಣೆಯನ್ನು ಯಾವ ರೀತಿ ಮಾಡಬಹುದು ಎಂಬುದರ ಕುರಿತು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ತಜ್ಞರು, ನಾಗರಿಕ ವಲಯ ಹಾಗೂ ಸರ್ಕಾರಿ ಅಧಿಕಾರಿಗಳ ಒಂದು ತಂಡ ರಚಿಸಿ’ ಎಂದು ನ್ಯಾಯಪೀಠ ಇದೇ ವೇಳೆ ಸಲಹೆ ನೀಡಿತು.

‘ರಾಜಕಾಲುವೆಗಳ ಉಸ್ತುವಾರಿ ಅತ್ಯಂತ ನಿರ್ಲಕ್ಷ್ಯದಿಂದ ಕೂಡಿದೆ. ಇದರಿಂದಾಗಿ ಚರಂಡಿ ನೀರು ರಾಜಕಾಲುವೆಗಳಲ್ಲಿ ಸೇರುತ್ತಿದೆ. ಸಾಕಷ್ಟು ಕಡೆ ರಾಜಕಾಲುವೆ ಒತ್ತುವರಿ ಆಗಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲ ತೀವ್ರ ದುಷ್ಪರಿಣಾಮ ಉಂಟಾಗುತ್ತಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.