ADVERTISEMENT

ಬಿಡದಿ ಬಳಿ ಉಪನಗರ ನಿರ್ಮಾಣ: ಸಚಿವ ಜಾರ್ಜ್‌

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 19:30 IST
Last Updated 6 ಫೆಬ್ರುವರಿ 2018, 19:30 IST

ಬೆಂಗಳೂರು: ನಗರದ ಸಂಚಾರ ದಟ್ಟಣೆ ಮತ್ತು ಜನಸಾಂದ್ರತೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ (ಬಿಎಂಆರ್‌ಡಿಎ) ಬಿಡದಿ ಬಳಿ 10 ಸಾವಿರ ಎಕರೆ ಪ್ರದೇಶದಲ್ಲಿ ಸ್ಮಾರ್ಟ್ ಸಿಟಿ ಸಮಗ್ರ ಉಪನಗರ ನಿರ್ಮಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಎನ್.ಎ. ಹ್ಯಾರಿಸ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲಸ, ಆಟ, ವಸತಿ ಈ ಅಂಶಗಳನ್ನು ಇಟ್ಟಕೊಂಡು ಗ್ರೇಟರ್ ಬೆಂಗಳೂರು ಸ್ಮಾರ್ಟ್ ಸಿಟಿ ರೂಪಿಸಲಾಗಿದೆ. ಈಗಾಗಲೇ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಸದ್ಯದಲ್ಲೇ ಟೆಂಡರ್ ಕರೆಯಲಾಗುವುದು’ ಎಂದರು.

ಜನದಟ್ಟಣೆ ಕಡಿಮೆ ಮಾಡಲು ಉಪನಗರ ವರ್ತುಲ ರಸ್ತೆ ಅಭಿವೃದ್ಧಿಗೂ ಉದ್ದೇಶಿಸಲಾಗಿದೆ. ರಾಮನಗರ- ಚನ್ನಪಟ್ಟಣ, ಬಿಡದಿ-ಹಾರೋಹಳ್ಳಿ, ನೆಲಮಂಗಲ-ಪೀಣ್ಯ, ದಾಬಸ್ ಪೇಟೆ-ನಾಗಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ-ಯಲಹಂಕ, ಹೊಸಕೋಟೆ-ಕೆ.ಆರ್. ಪುರ, ಎಲೆಕ್ಟ್ರಾನಿಕ್ ಸಿಟಿ, ಎಂಟು ಕ್ಲಸ್ಟರ್‌ ನಗರೀಕರಣ ಅಭಿವೃದ್ಧಿಗಾಗಿ ಕ್ರಮಕೈಗೊಳ್ಳಲಾಗಿದೆ ಎಂದರು.

ADVERTISEMENT

ಬಿಎಂಆರ್‌ಡಿಎ ವ್ಯಾಪ್ತಿಯಲ್ಲಿ ಬರುವ ಸ್ಥಳೀಯ ಯೋಜನಾ ಪ್ರದೇಶಗಳ ಮಹಾಯೋಜನೆ ತಯಾರಿ ಮತ್ತು ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗಿದೆ. ಕೃಷಿ ವಲಯದಲ್ಲಿರುವ ಗ್ರಾಮಗಳ ಗ್ರಾಮಾಭಿವೃದ್ಧಿ ನಕ್ಷೆ ತಯಾರಿಸುವ ಕೆಲಸ ಪ್ರಗತಿಯಲ್ಲಿದೆ ಎಂದರು.

‘ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫೆರಲ್ ರಿಂಗ್ ರಸ್ತೆ’

ಬೆಂಗಳೂರು: ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿ‌ದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಶಾಸಕ ಸುಬ್ಬಾರೆಡ್ಡಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‍ವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಹೊರವರ್ತುಲ ರಸ್ತೆ ನಿರ್ಮಿಸಲಾಗಿದೆ ಎಂದರು.

ಉದ್ದೇಶಿತ ಪೆರಿಫೆರಲ್ ರಿಂಗ್ ರಸ್ತೆಯನ್ನು ತುಮಕೂರು ರಸ್ತೆ ಬಳಿ ಹಾಗೂ ಹೊಸೂರು ರಸ್ತೆ ಬಳಿ ನೈಸ್ ರಸ್ತೆಗೆ ಜೋಡಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯನ್ನು ಸ್ಪೆಷಲ್ ಪರ್ಪಸ್ ವೆಹಿಕಲ್ (ಎಸ್‌ಪಿವಿ) ಮುಖಾಂತರ ಅನುಷ್ಠಾನಗೊಳಿಸಲು ಅಗತ್ಯವಿರುವ ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.