ADVERTISEMENT

ನ್ಯಾಯಮೂರ್ತಿ ಹುದ್ದೆ ಭರ್ತಿಗೆ ಚಾಲನೆ: ಸತ್ಯಾಗ್ರಹ ಅಂತ್ಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 19:30 IST
Last Updated 8 ಫೆಬ್ರುವರಿ 2018, 19:30 IST

ಬೆಂಗಳೂರು: ‘ಹೈಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಕೇಂದ್ರ ಸರ್ಕಾರ ಮುಂದಾಗಿದೆ’ ಎಂಬ ಕಾರಣಕ್ಕೆ ವಕೀಲರು ಗುರುವಾರ ಸರಣಿ ಸತ್ಯಾಗ್ರಹ ಅಂತ್ಯಗೊಳಿಸಿದರು.

‘ಕೊಲಿಜಿಯಂ ಶಿಫಾರಸು ಮಾಡಿರುವ ಐದು ಜನರ ಹೆಸರುಗಳಿಗೆ ಪ್ರಧಾನ ಮಂತ್ರಿ ಬುಧವಾರ (ಫೆ.7) ಒಪ್ಪಿಗೆ ನೀಡಿ ರಾಷ್ಟ್ರಪತಿ ಅಂಕಿತಕ್ಕೆ ರವಾನಿಸಿದ್ದಾರೆ. ಹೀಗಾಗಿ ಸತ್ಯಾಗ್ರಹ ಹಿಂದೆಗೆದುಕೊಳ್ಳಲಾಗುತ್ತಿದೆ’ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮತ್ತು ಪ್ರಧಾನ ಕಾರ್ಯದರ್ಶಿ ಎ.ಎನ್‌.ಗಂಗಾಧರಯ್ಯ ತಿಳಿಸಿದ್ದಾರೆ.

‘2016ರಿಂದ ಕೊಲಿಜಿಯಂ ಶಿಫಾರಸು ಮಾಡಿರುವ ಜಿಲ್ಲಾ ನ್ಯಾಯಾಧೀಶರು ಮತ್ತು ವಕೀಲರ ಹೆಸರುಗಳನ್ನೂ ಇನ್ನೊಂದು ವಾರದಲ್ಲಿ ಪರಿಗಣಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಲಾಗಿದೆ.

ADVERTISEMENT

ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಆಗ್ರಹಿಸಿ ಹಿರಿಯ ಮತ್ತು ಕಿರಿಯ ವಕೀಲರು ಹೈಕೋರ್ಟ್‌ ಮುಂಭಾಗದ ಗೋಲ್ಡನ್‌ ಜ್ಯುಬಿಲಿ ಗೇಟ್‌ನಲ್ಲಿ ಫೆ.5ರಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಮಂಜೂರಾದ ಹುದ್ದೆಗಳ ಸಂಖ್ಯೆ 62. ಸದ್ಯ 24 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.