ADVERTISEMENT

ಒಳಾಂಗಳ ಕ್ರೀಡಾಂಗಣ ನಿರ್ಮಾಣ ಟೆಂಡರ್‌ಗೆ ತಡೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 19:30 IST
Last Updated 8 ಫೆಬ್ರುವರಿ 2018, 19:30 IST

ಬೆಂಗಳೂರು: ಇಂದಿರಾನಗರ ಮೊದಲ ಹಂತದಲ್ಲಿರುವ ಆಟದ ಮೈದಾನದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕರೆದಿರುವ ಟೆಂಡರ್‌ಗೆ ಹೈಕೋರ್ಟ್ ತಡೆ ನೀಡಿದೆ.
ಗುತ್ತಿಗೆ ರದ್ದು ಕೋರಿ ಇಂದಿರಾನಗರ 1ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಕಾರ್ಯದರ್ಶಿ ಪಿ.ಕೆ.ಗೋಪಾಲಕೃಷ್ಣ ಹಾಗೂ ಖಜಾಂಚಿ ಡಿ.ವಿ.ಅಶೋಕ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಪೀಠ ಸೂಚಿಸಿದೆ.

‘ಒಳಾಂಗಣ ಕ್ರೀಡಾಂಗಣ ನಿರ್ಮಿಸಿದರೆ ಅಲ್ಲಿ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿರುವುದಿಲ್ಲ. ಇದರಿಂದ ಸ್ಥಳೀಯ ನಿವಾಸಿಗಳು, ಮಕ್ಕಳು, ಹಿರಿಯ ನಾಗರಿಕರಿಗೆ ತೊಂದರೆಯಾಗಲಿದೆ. ಆದ್ದರಿಂದ ಟೆಂಡರ್ ರದ್ದುಪಡಿಸಲು ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.