ಬೆಂಗಳೂರು: ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸ್ಥಾಪನೆಗೆ ರಾಮನಗರದ ಬಳಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು 746 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಸೋಮವಾರ ರದ್ದು ಮಾಡಿದೆ.
2008ರ ಆ.19ರಂದು ಹೊರಡಿಸಲಾಗಿದ್ದ ಅಧಿಸೂಚನೆ ಪ್ರಶ್ನಿಸಿ ಚಿಕ್ಕಣ್ಣ ಹಾಗೂ ಇತರ ಭೂಮಾಲೀಕರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಮಾನ್ಯ ಮಾಡಿದ್ದಾರೆ.2006ರಲ್ಲಿ ಹೊರಟ ಪ್ರಾಥಮಿಕ ಅಧಿಸೂಚನೆಯಲ್ಲಿ 1032 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿತ್ತು.
ಇಷ್ಟು ಜಮೀನಿನ ಅವಶ್ಯಕತೆ ಇಲ್ಲದಿದ್ದರೂ ವಿವೇಚನಾ ರಹಿತವಾಗಿ ಬೃಹತ್ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ನಂತರ ಆ ಪೈಕಿ 286 ಎಕರೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿತು.
ನಿಗಮದ ಸ್ಥಾಪನೆ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದರೂ ಮಂಡಳಿ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಇದು ಕಾನೂನು ಬಾಹಿರ ಎಂದು ಅರ್ಜಿದಾರರು ಆರೋಪಿಸಿದ್ದರು. ಆದುದರಿಂದ ಅಧಿಸೂಚನೆ ರದ್ದು ಮಾಡಿ ನ್ಯಾಯಮೂರ್ತಿಗಳು ಆದೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.