ADVERTISEMENT

ಬಿಡಿಎ ಅಕ್ರಮ: ದಾಖಲೆ ಪರಿಶೀಲನೆಗೆ ಎಸಿಬಿ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 16:28 IST
Last Updated 22 ನವೆಂಬರ್ 2021, 16:28 IST

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳಲ್ಲಿ ಶುಕ್ರವಾರ ಮತ್ತು ಶನಿವಾರ ಶೋಧ ನಡೆಸಿ, ವಶಕ್ಕೆ ಪಡೆದಿರುವ ದಾಖಲೆಗಳನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳವಾರದಿಂದ ಪರಿಶೀಲನೆ ನಡೆಸಲಿದ್ದಾರೆ.

ಭೂಸ್ವಾಧೀನ, ಪರಿಹಾರ ವಿತರಣೆ, ನಿವೇಶನ ಹಂಚಿಕೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ನೂರಾರು ಕಡತಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಲ್ಲ ಕಡತಗಳನ್ನೂ ತನಿಖಾ ಸಂಸ್ಥೆಯ ಕಚೇರಿಗೆ ತರಲಾಗಿದೆ. ಎಸ್‌ಪಿಗಳಾದ ಜಿ.ಎಚ್‌. ಯತೀಶ್‌ ಚಂದ್ರ, ಅಬ್ದುಲ್‌ ಅಹದ್‌ ಮತ್ತು ಉಮಾ ಪ್ರಶಾಂತ್‌ ನೇತೃತ್ವದಲ್ಲಿ ಮಂಗಳವಾರದಿಂದ ಈ ಕಡತಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ವಶಕ್ಕೆ ಪಡೆದಿರುವ ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೇ ವಿಚಾರಣೆಗೆ ಹಾಜರಾಗುವಂತೆ ಬಿಡಿಎ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಲು ತನಿಖಾ ತಂಡ ನಿರ್ಧರಿಸಿದೆ. ವಿಷಯವಾರು ದಾಖಲೆಗಳನ್ನು ಪ್ರತ್ಯೇಕಿಸಿದ ಬಳಿಕ ಎಫ್‌ಐಆರ್‌ ದಾಖಲಿಸುವ ಕುರಿತು ಅಂತಿಮ ನಿರ್ಧಾರ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.