ಬೆಂಗಳೂರು: ಬೆಂಗಳೂರು–ಬಳ್ಳಾರಿ ರಸ್ತೆಯ ಸರ್ವಿಸ್ ರಸ್ತೆಯ ಯಶೋಧರ ನಗರ ಕ್ರಾಸ್ ಬಳಿ ಕಾರು ಹಾಗೂ ದ್ವಿಚಕ್ರ ವಾಹನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.
ಕೊಡಿಗೇಹಳ್ಳಿ ನಿವಾಸಿ ಅರುಣ್(25) ಮೃತ ಸವಾರ. ಬುಧವಾರ ನಸುಕಿನ ವೇಳೆ ಅಪಘಾತ ನಡೆದಿದೆ.
ಮೃತ ಸವಾರ ಅರುಣ್ ತಮ್ಮ ದ್ವಿಚಕ್ರ ವಾಹನದಲ್ಲಿ ಬರುವಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಅರುಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದಾನೆ.
ಕಾರು ಚಾಲಕನ ಪತ್ತೆಗೆ ಘಟನಾ ಸ್ಥಳದ ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.