ADVERTISEMENT

ಬೈಕ್‌ ಟ್ಯಾಕ್ಸಿ ವಿರುದ್ಧ ಇಂದಿನಿಂದ ಕ್ರಮ: ಗ್ರಾಹಕರೆ ಎಚ್ಚರ!

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 0:42 IST
Last Updated 16 ಜೂನ್ 2025, 0:42 IST
ಅನಧಿಕೃತ ಬೈಕ್‌ ಟ್ಯಾಕ್ಸಿ ಓಡಾಟ ‘ರ್ಯಾಪಿಡೊ’ ಕಂಪೆನಿ ವಿರುದ್ಧ ಪ್ರಕರಣ
ಅನಧಿಕೃತ ಬೈಕ್‌ ಟ್ಯಾಕ್ಸಿ ಓಡಾಟ ‘ರ್ಯಾಪಿಡೊ’ ಕಂಪೆನಿ ವಿರುದ್ಧ ಪ್ರಕರಣ   

ಬೆಂಗಳೂರು: ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಬೇಕು ಎಂದು ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ನಿರಾಕರಿಸಿದ್ದು, ಸಾರಿಗೆ ಅಧಿಕಾರಿಗಳು ಸೋಮವಾರದಿಂದ ಬೈಕ್‌ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ.

 ‘ಮೋಟಾರು ವಾಹನ ಕಾಯ್ದೆ–1988ರ ಕಲಂ 93ರ ಅನುಸಾರ ರಾಜ್ಯ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುವ ತನಕ ಸಂಬಂಧಿತ ಸಂಸ್ಥೆಗಳಾದ ಓಲಾ, ಉಬರ್‌ ಮತ್ತು ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಬೇಕು’ ಎಂದು ಏಕಸದಸ್ಯ ನ್ಯಾಯಪೀಠ ಆದೇಶ ನೀಡಿತ್ತು. 

ಈ ಆದೇಶದ ವಿರುದ್ಧ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌’, ‘ರೊಪ್ಪೆನ್‌ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ (ರ‍್ಯಾಪಿಡೊ)’ ಮತ್ತು ‘ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ (ಓಲಾ)’ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ‘ಬೈಕ್‌ ಟ್ಯಾಕ್ಸಿ ಸೇವೆಯನ್ನು ರಾಜ್ಯದಲ್ಲಿ ಮುಂದುವರಿಸಲು ನಿರ್ದೇಶಿಸಬೇಕು’ ಎಂದು ಕೋರಿದ್ದವು. ಆದರೆ, ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠವು ನಿರಾಕರಿಸಿತ್ತು. 

ADVERTISEMENT

ಜೂನ್‌ 16ರಿಂದ ಬೈಕ್ ಟ್ಯಾಕ್ಸಿಗಳು ಪ್ರಯಾಣಿಕರನ್ನು ಕರೆದೊಯ್ದರೆ ಮುಟ್ಟುಗೋಲು ಹಾಕಿಕೊಳ್ಳುವ, ₹ 2,000ದಿಂದ ₹ 10 ಸಾವಿರದವರೆಗೆ ದಂಡ ಬೀಳುವ ಸಾಧ್ಯತೆ ಇದೆ. ಮೂರು ತಿಂಗಳಿನಿಂದ ಒಂದು ವರ್ಷದವರೆಗೆ ಜೈಲು ಶಿಕ್ಷೆಗೂ ಅವಕಾಶವಿದೆ. 

‘ಬೈಕ್‌ ಟ್ಯಾಕ್ಸಿಗಳನ್ನು ಸ್ಥಗಿತಗೊಳಿಸಬೇಕು ಎಂಬ ಹೈಕೋರ್ಟ್ ಆದೇಶವನ್ನು ಜಾರಿಗೊಳಿಸಲು ಸಾರಿಗೆ ಅಧಿಕಾರಿಗಳು ಸಿದ್ಧರಿದ್ದಾರೆ’ ಎಂದು ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್‌.ವಿ. ಪ್ರಸಾದ್‌ ತಿಳಿಸಿದ್ದಾರೆ.

‘ಹೈಕೋರ್ಟ್‌ ಆದೇಶವನ್ನು ಬೈಕ್‌ ಟ್ಯಾಕ್ಸಿ ಕಂಪನಿಗಳು ಹೇಗೆ ಪಾಲನೆ ಮಾಡುತ್ತವೆ ಎಂದು ನೋಡಿಕೊಂಡು ಕ್ರಮ ಕೈಗೊಳ್ಳಲಾಗುವುದು’ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ. ಯೋಗೀಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.