ಬೆಂಗಳೂರು: ಜ್ಞಾನ ಭಾರತಿ ಆವರಣದಲ್ಲಿರುವ ಗಾಂಧಿಯ ಅಧ್ಯಯನ ಕೇಂದ್ರದ ಕಟ್ಟಡವನ್ನು ಜೀರ್ಣೋದ್ಧಾರ ಮಾಡಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿರುವ ಗಾಂಧಿ ಅಧ್ಯಯನ ಕೇಂದ್ರದ ಅವ್ಯವಸ್ಥೆ ಕುರಿತು ‘ಪ್ರಜಾವಾಣಿ’ಯ ಫೆಬ್ರುವರಿ 7ರ ಸಂಚಿಕೆಯಲ್ಲಿ ‘ಗಾಂಧಿ ಅಧ್ಯಯನ ಕೇಂದ್ರಕ್ಕೆ ಪುಂಡರ ಕಾಟ’ ಎಂಬ ಶೀರ್ಷಿಕೆ ಅಡಿಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರ ಸಚಿವಾಲಯವು, ಈ ಬಗ್ಗೆ ಅನುಪಾಲನ ವರದಿ ನೀಡುವಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿತ್ತು.
‘ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರು ಗಾಂಧಿ ಭವನದ ಕಟ್ಟಡವನ್ನು ಜೀರ್ಣೋದ್ಧಾರ ಮಾಡುವಂತೆ ಪ್ರಸ್ತಾವ ಸಲ್ಲಿಸಿದ್ದರು. ಕೇಂದ್ರದ ಕಿಟಕಿಗಳಿಗೆ ಗ್ರಿಲ್, ಗೋಡೆಗಳಿಗೆ ಪ್ಲಾಸ್ಟಿಂಗ್, ನೀರು ಸರಬರಾಜು ಸೇರಿದಂತೆ ಕಟ್ಟಡದ ವಿವಿಧ ದುರಸ್ತಿ ಕೆಲಸಗಳಿಗೆ ₹ 9.58 ಲಕ್ಷ ವೆಚ್ಚದಲ್ಲಿ ಪ್ರಸ್ತಾವ ತಯಾರಿಸಲಾಗಿದೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ. ವೈಷ್ಣವಿ ಅವರಿಗೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ ತಿಳಿಸಿದ್ದಾರೆ.
ಗಾಂಧಿ ಅಧ್ಯಯನ ಕೇಂದ್ರಕ್ಕೆ ಭದ್ರತಾ ಸಿಬ್ಬಂದಿ ನಿಯೋಜನೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.