ADVERTISEMENT

ಪರಿಶಿಷ್ಟ ಜಾತಿ ಸಮೀಕ್ಷೆಗೆ ಹೆಚ್ಚುವರಿ ಗಣತಿದಾರರು: ಮುಹೇಶ್ವರ್ ರಾವ್

​ಪ್ರಜಾವಾಣಿ ವಾರ್ತೆ
Published 27 ಮೇ 2025, 16:17 IST
Last Updated 27 ಮೇ 2025, 16:17 IST
   

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮುದಾಯ ಹೆಚ್ಚು ವಾಸವಿರುವ ಪ್ರದೇಶಗಳಿಗೆ ಹೆಚ್ಚುವರಿ ಗಣತಿದಾರರನ್ನು ನಿಯೋಜಿಸಿ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಮುಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯ ಕಾರ್ಯಪ್ರಗತಿ ಕುರಿತು ಪೂರ್ವ ವಲಯ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಹಕಾರಕ್ಕೆ ಮನವಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಯಶಸ್ವಿಗಾಗಿ ಸಹಕರಿಸಲು ರಾಜ್ಯಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷೆ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ಅವರು ಸಮುದಾಯ ಮುಖಂಡರು, ಪದಾಧಿಕಾರಿಗಳಲ್ಲಿ ಮನವಿ ಮಾಡಿದರು.

ADVERTISEMENT

ಜಾತಿ ತಿಳಿಯುವುದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಹಿತದೃಷ್ಟಿಯಿಂದ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಾಗುತ್ತಿದೆ. ನಗರದಲ್ಲಿ ನಿರಂತರವಾಗಿ ಮಳೆಯಾದ ಪರಿಣಾಮ ಸಮೀಕ್ಷಾ ಕಾರ್ಯವು ತಡವಾಗಿದ್ದು, ಮನೆ-ಮನೆ, ಕ್ಯಾಂಪ್ ಹಾಗೂ ಸ್ವಯಂ ಘೋಷಿತವಾಗಿ ಆನ್ ಲೈನ್ ಮೂಲಕ ಮೂರು ಹಂತಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷಾ ಕಾರ್ಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯಮಟ್ಟದ ಸಮಿತಿಯ ಸದಸ್ಯರು ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮಾತನಾಡಿ, ‘ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸುವ ಗುರಿಯಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್ ಗಳಿಗೂ ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜಿಸಿ ಸಮೀಕ್ಷಾ ಕಾರ್ಯಕ್ಕೆ ವೇಗ ನೀಡಲಾಗುವುದು’ ಎಂದರು.

‘ನಗರದಲ್ಲಿ ಸಮೀಕ್ಷಾ ಅವಧಿ ವಿಸ್ತರಿಸಬೇಕು, ಸ್ಥಳೀಯರನ್ನು ಗಣತಿದಾರರನ್ನಾಗಿ ನಿಯೋಜಿಸಿ ಸಮೀಕ್ಷೆ ಕಾರ್ಯ ಮಾಡಬೇಕು, ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಮನೆ-ಮನೆ ಸಮೀಕ್ಷೆ ಮಾಡಬೇಕು’ ಎಂದು ಸಮುದಾಯದ ಮುಖಂಡರು ಸಲಹೆ ನೀಡಿದರು.

ಮಾಜಿ ಸಚಿವ ಎಚ್. ಆಂಜನೇಯ, ರಾಜ್ಯಮಟ್ಟದ ಸಮನ್ವಯ ಸಮಿತಿಯ ಸದಸ್ಯ ಕಾರ್ಯದರ್ಶಿ ರಾಕೇಶ್ ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.