
ಬೆಂಗಳೂರು: ವಾಹನ ತಪಾಸಣಾ ಸಂದರ್ಭದಲ್ಲಿ ಹಾಗೂ ದಂಡದ ಮೊತ್ತ ವಸೂಲಿ ಮಾಡುವಾಗ ಚಾಲಕರು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ಅವರು ಪೊಲೀಸ್ ಸಿಬ್ಬಂದಿಗೆ ಸೂಚಿಸಿದ್ದಾರೆ.
ಕೆಲವು ಪೊಲೀಸ್ ಸಿಬ್ಬಂದಿ ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ, ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಕಂಡು ಬಂದಿರುವ ಬಗ್ಗೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯ ಮೋಹನ್ ಕುಮಾರ್ ದಾನಪ್ಪ ದೂರು ನೀಡಿದ್ದರು.
ದೂರಿನ ಬೆನ್ನಲ್ಲೆ ಆದೇಶ ಹೊರಡಿಸಿರುವ ಹಿತೇಂದ್ರ, ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.