ADVERTISEMENT

ವಿಶ್ವಕರ್ಮ ನಿಗಮದ ಸಾಲ ಮನ್ನಾಕ್ಕೆ ಆಗ್ರಹಿಸಿ ಮಾ. 4ರಂದ ಧರಣಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 16:07 IST
Last Updated 28 ಫೆಬ್ರುವರಿ 2024, 16:07 IST
   

ಬೆಂಗಳೂರು: ‘ವಿಶ್ವಕರ್ಮ ಅಭಿವೃದ್ಧಿ ನಿಗಮದಲ್ಲಿ ಬಾಕಿ ಇರುವ ಸಾಲ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಮಾ. 4ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜ ತಿಳಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಮಳವಳ್ಳಿ ಶ್ರೀನಿವಾಸ್, ‘ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ ಅನುದಾನ ನೀಡಬೇಕು. ವಿಧಾನಸೌಧದ ಆವರಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಪ್ರತಿಮೆ ಸ್ಥಾಪಿಸಬೇಕು. ಅಭಿವೃದ್ಧಿ ನಿಗಮದ ಮೂಲಕ ಸಮಾಜದ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ, ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಬೇಕು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ತಲಾ ಒಂದರಂತೆ ವಿಶ್ವಕರ್ಮ ವಸತಿಶಾಲೆಗಳನ್ನು ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

‘ಬಜೆಟ್‌ನಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮುಂಚಿತವಾಗಿ ಮನವಿ ಸಲ್ಲಿಸಲಾಗಿತ್ತು. ಆದರೆ, ಸರ್ಕಾರ ನಮ್ಮ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಿರ್ದಿಷ್ಟಾವಧಿ ಧರಣಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

ADVERTISEMENT

ಆದಿಲಕ್ಷ್ಮೀ ವಿಶ್ವಕರ್ಮ ಮಠದ ನೀಲಕಂಠಾಚಾರ್ಯ ಸ್ವಾಮೀಜಿ, ಸಮಾಜದ ಉಪಾಧ್ಯಕ್ಷ ಟಿ.ಕೆ. ಪುರುಷೋತ್ತಮ, ಕಾರ್ಯಾಧ್ಯಕ್ಷ ಗುರು ವಿಶ್ವಕರ್ಮ, ಆಶಾ ರಮೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.