ಬೆಂಗಳೂರು: ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬರುವ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇಕಡ 1ರಷ್ಟು ಒಳ ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಸದಸ್ಯರು ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಅಲೆಮಾರಿ ಸಮುದಾಯಗಳ ಸಾವಿರಾರು ಮಂದಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಒಳ ಮೀಸಲಾತಿ ಜಾರಿ ಮಾಡುವ ಒತ್ತಡದಲ್ಲಿದ್ದ ಸರ್ಕಾರ 101 ಪರಿಶಿಷ್ಟ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಮೀಸಲಾತಿ ಪ್ರಮಾಣವನ್ನು ಎಚ್ಚರಿಕೆಯಿಂದ ನಿಗದಿಪಡಿಸಬೇಕಿತ್ತು. ಅದರಲ್ಲೂ ದನಿ ಇಲ್ಲದ ಅಲೆಮಾರಿಗಳಂತಹ ಸಮುದಾಯಗಳ ವಿಷಯದಲ್ಲಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಪ್ರತಿಭಟನಕಾರರು ಬೇಸರ ವ್ಯಕ್ತಪಡಿಸಿದರು.
‘ನಾಗಮೋಹನದಾಸ್ ಆಯೋಗವು ವೈಜ್ಞಾನಿಕವಾಗಿ ಒಳ ಮೀಸಲಾತಿ ಹಂಚಿಕೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದರಲ್ಲಿ ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಒಳ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿತ್ತು. ಆ ಪ್ರಕಾರ ಶೇ 1ರಷ್ಟು ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
‘ಪರಿಶಿಷ್ಟ ಜಾತಿಗಳಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನದಲ್ಲಿ ಶೇ 1ರಷ್ಟನ್ನು ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕೆ ಮೀಸಲಿಡಬೇಕು. ಕೊರಮ, ಕೊರಚ ಸಮುದಾಯಗಳನ್ನು ಹೊರಗಿಟ್ಟು ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ, ಹೆಚ್ಚು ಅನುದಾನ ಒದಗಿಸಬೇಕು’ ಎಂದು ಒತ್ತಾಯಿಸಿದರು
‘ಶೇ 1ರಷ್ಟು ಒಳ ಮೀಸಲಾತಿ ಸಿಗುವವರೆಗೂ ಬೆಂಗಳೂರು ಬಿಟ್ಟು ಹೋಗುವುದಿಲ್ಲ. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಾಹಿತಿ ಬಂಜಗೆರೆ ಜಯಪ್ರಕಾಶ್, ಅಂಕಣಕಾರ ಶಿವಸುಂದರ್, ಅಲೆಮಾರಿ ಸಮುದಾಯಗಳ ಮುಖಂಡರಾದ ಡಿ. ಗೋಪಾಲ್, ಬಾಲ ಗುರುಮೂರ್ತಿ, ವಡ್ಡಗೆರೆ ನಾಗರಾಜಯ್ಯ, ನಟ ಚೇತನ್, ಅಂಬಣ್ಣ ಅರೋಲಿಕರ್, ಶೇಷಪ್ಪ, ಹೆಣ್ಣೂರು ಶ್ರೀನಿವಾಸ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.