ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರ ಮೇಲೆ ಎಸಿಪಿ ಚಂದನ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಬಸವೇಶ್ವರ ನಗರ ಪೊಲೀಸ್ ಠಾಣೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ಮತ್ತು ಮಾಜಿ ಸಂಸದ ಪ್ರತಾಪ ಸಿಂಹ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಪುನೀತ್ ಕೆರೆಹಳ್ಳಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಪುನೀತ್ ಹಾಗೂ ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು, ಕೆಲವು ಸಮಯದ ಬಳಿಕ ಬಿಡುಗಡೆ ಮಾಡಿದರು.
‘ಘಟನೆ ವೇಳೆ ಸ್ಥಳಕ್ಕೆ ಬಂದಿದ್ದ ಅಬ್ದುಲ್ ರಜಾಕ್ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಅಲ್ಲಿಗೆ ಭೇಟಿ ನೀಡಿದ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಬಂದು ಹಲ್ಲೆ ಮಾಡಲಾಗಿದೆ. ಅಬ್ದುಲ್ ರಜಾಕ್ ಅವರನ್ನು ಇನ್ನೂ ಏಕೆ ಬಂಧಿಸಿಲ್ಲ? ಪುನೀತ್ ಬಟ್ಟೆ ಬಿಚ್ಚಿಸೋಕೆ ಕಾನೂನಿನಲ್ಲಿ ಅವಕಾಶವಿದೆಯೆ? ಅವರ ಬಟ್ಟೆ ಬಿಚ್ಚಿಸಲು ಪೊಲೀಸ್ ಇಲಾಖೆಯಲ್ಲಿ ಯಾರಾದರೂ ಸಲಿಂಗ ಕಾಮಿಗಳು ಇದ್ದಾರಾ’ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಪ್ರತಾಪ ಸಿಂಹ ಮತ್ತು ಪುನೀತ್ ಕೆರೆಹಳ್ಳಿ ಅವರು ಎಸಿಪಿ ಚಂದನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹೆಚ್ಚುವರಿ ಪೊಲೀಸ್ ಕಮಿಷನರ್ ಸತೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು.
ಪ್ರತಾಪ್ ಸಿಂಹ ವಿರುದ್ಧ ದೂರು: ಪುನೀತ್ ಕೆರೆಹಳ್ಳಿ ಬಂಧನ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಎಸಿಪಿ ಚಂದನ್ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪ್ರತಾಪ ಸಿಂಹ ವಿರುದ್ಧ ಆಮ್ ಆದ್ಮಿ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಜಿ.ಎಚ್.ಲೋಹಿತ್ ಕುಮಾರ್ ಅವರು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಅವರಿಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲು:
ಠಾಣೆ ಮುಂದೆ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದಾಗಿ ಪುನೀತ್ ಕೆರೆಹಳ್ಳಿ, ಪ್ರತಾಪ ಸಿಂಹ, ಹರೀಶ್ ಪೂಂಜ, ಜಯಣ್ಣ ಹಾಗೂ ಸೇರಿದಂತೆ ಹಲವರ ವಿರುದ್ಧ ಬಸವೇಶ್ವರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.