ADVERTISEMENT

ಅಮೂಲ್ಯಾ ಪ್ರಕರಣ: ವಿಭಾಗೀಯ ನ್ಯಾಯಪೀಠಕ್ಕೆ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 22:22 IST
Last Updated 30 ಜೂನ್ 2020, 22:22 IST
ಹೈಕೋರ್ಟ್
ಹೈಕೋರ್ಟ್    

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದಡಿ ಅಮೂಲ್ಯಾ ಲಿಯೋನಾ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ವಿಭಾಗೀಯ ನ್ಯಾಯಪೀಠಕ್ಕೆ ವರ್ಗಾಯಿಸಿದೆ.

ಈ ಕುರಿತಂತೆ ರಾಜ್ಯ ವಕೀಲರ ಪರಿಷತ್‌ ಸದಸ್ಯ ವಿಶಾಲ ರಘು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ಮನವಿ ಪರಿಶೀಲಿಸಿದ ನ್ಯಾಯಪೀಠ, ’ಅರ್ಜಿದಾರರ ಈ ಮನವಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೂಲಕ ಮಾತ್ರ ಪರಿಗಣಿಸಬಹುದು’ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ADVERTISEMENT

ಮನವಿಯಲ್ಲಿ ಏನಿದೆ?:’ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಸಾಕ್ಷಿಗಳಿದ್ದರೂ ತನಿಖಾಧಿಕಾರಿ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಆದ್ದರಿಂದ, ತನಿಖಾಧಿಕಾರಿ ವಿರುದ್ಧ ಕ್ರಮ ಜರುಗಿಸಲು ಹಾಗೂ ಅಮೂಲ್ಯಾ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಅಮೂಲ್ಯಾ ಭಯೋತ್ಪಾದಕರ ಸಂಪರ್ಕ ಹೊಂದಿರುವ ಸಾಧ್ಯತೆ ಇದ್ದು ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.