ADVERTISEMENT

ಮುಖ್ಯಮಂತ್ರಿ ಭರವಸೆ: ಅಂಗನವಾಡಿ ನೌಕರರ ಧರಣಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 16:20 IST
Last Updated 22 ಫೆಬ್ರುವರಿ 2022, 16:20 IST
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಪ್ರಮುಖರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಇದ್ದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಪ್ರಮುಖರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಇದ್ದರು.   

ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಅಂತ್ಯಗೊಂಡಿದೆ.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ನೇತೃತ್ವದಲ್ಲಿ ಸೋಮವಾರದಿಂದ ಧರಣಿ ಆರಂಭಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಥಳಕ್ಕೆ ಭೇಟಿ ನೀಡಿ, ಮನವಿ ಆಲಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದಿದ್ದರು.

‘ಅಧಿವೇಶನ ನಡೆಯುತ್ತಿದ್ದು, ರಾಜ್ಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಹೀಗಾಗಿ, ಪ್ರತಿಭಟನಾ ಸ್ಥಳಕ್ಕೆ ಬರಲು ಆಗುವುದಿಲ್ಲ. ನಿಯೋಗದಲ್ಲಿ ಬಂದು ಮನವಿ ನೀಡಿ’ ಎಂದು ಮುಖ್ಯಮಂತ್ರಿ ಸಂದೇಶ ಕಳುಹಿಸಿದ್ದರು. ಮುಖಂಡರ ನಿಯೋಗವು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿತು.

ADVERTISEMENT

ಮನವಿ ಸ್ವೀಕರಿಸಿದ ಬೊಮ್ಮಾಯಿ, ‘ಬೇಡಿಕೆಗಳು ನ್ಯಾಯಯುತವಾಗಿವೆ. ಬಜೆಟ್‌ನಲ್ಲಿ ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ’ ಎಂದರು. ಅವರ ಭರವಸೆಗೆ ಮುಖಂಡರು ಒಪ್ಪಿದರು.

ತಮ್ಮೂರಿಗೆ ಹೊರಟರು: ಸ್ವಾತಂತ್ರ್ಯ ಉದ್ಯಾನಕ್ಕೆ ಬಂದ ಮುಖಂಡರು, ಧರಣಿ ಅಂತ್ಯಗೊಳಿಸುವುದಾಗಿ ಘೋಷಿಸಿದರು. ನಂತರ, ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮೂರಿನತ್ತ ಹೊರಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.