ಬೆಂಗಳೂರು: ‘ತಕ್ಷಣವೇ ಕೆಲಸಕ್ಕೆ ಹಾಜರಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ನೋಟಿಸ್ ಜಾರಿ ಮಾಡಿದ್ದು, ಆ ನೋಟಿಸ್‌ಗಳಿಗೆ ಹೆದರುವುದಿಲ್ಲ. ಬೇಡಿಕೆ ಈಡೇರುವ ತನಕ ಪ್ರತಿಭಟನಾ ಸ್ಥಳವನ್ನು ಬಿಟ್ಟು ಕದಲುವುದಿಲ್ಲ’ ಎಂದು ಅಂಗನವಾಡಿ ಕಾರ್ಯಕರ್ತೆಯರು ಶನಿವಾರ ಘೋಷಿಸಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯದ ವಿವಿಧ ಭಾಗದಿಂದ ಬಂದಿರುವ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯು ಐದು ದಿನ ಪೂರೈಸಿದೆ. ನೋಟಿಸ್ ಜಾರಿ ಬೆನ್ನಲ್ಲೇ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ತೀವ್ರಗೊಳಿಸಿದ್ದು, ಶನಿವಾರ ಸಹ ಕೆಲವು ಜಿಲ್ಲೆಗಳ ಕಾರ್ಯಕರ್ತೆಯರು ಪ್ರತಿಭಟನಾ ಸ್ಥಳಕ್ಕೆ ಬಂದರು.
‘ಫೆಬ್ರುವರಿ 1ರಿಂದ ಕೆಲಸಕ್ಕೆ ಹಾಜರಾಗಬೇಕು. ಇಲ್ಲದಿದ್ದರೆ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಏಳು ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ. ‘ಯಾರು ಎಷ್ಟೇ ನೋಟಿಸ್ ಜಾರಿ ಮಾಡಲಿ. ನೋಟಿಸ್‌ಗೆ ಹೆದರಿ ಪ್ರತಿಭಟನೆ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ’ ಎಂದು ಪ್ರತಿಭಟನೆನಿರತ ಮಹಿಳೆಯರು ಎಚ್ಚರಿಸಿದರು.
ಶುಕ್ರವಾರ ಮಧ್ಯಾಹ್ನ ಒಂದು ಭಾಗದ ಟೆಂಟ್ ಅನ್ನು ತೆರವು ಮಾಡಲಾಗಿತ್ತು. ಪ್ರತಿಭಟನಕಾರರೇ ಟೆಂಟ್ ಹಾಕಿಸಿಕೊಂಡು ಅದೇ ಸ್ಥಳದಲ್ಲಿ ಶನಿವಾರ ಪ್ರತಿಭಟನೆ ಮುಂದುವರೆಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಚರ್ಚಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಇಲಾಖೆಯಲ್ಲೂ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಆದರೆ ಅವರ ಜೇಬು ಮಾತ್ರ ಭರ್ತಿ ಆಗುತ್ತಿದೆ.ಆರ್.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಬಳಿಕ ಮಾತನಾಡಿದ ಆರ್.ಅಶೋಕ, ‘ಕಾಂಗ್ರೆಸ್ ಮುಖಂಡರು, ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು’ ಎಂದು ಆಗ್ರಹಿಸಿದರು.
‘ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಗಂಟು–ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಕುಡಿಯುವ ನೀರು, ಶೌಚಾಲಯ, ಟೆಂಟ್ ಸೌಲಭ್ಯ ನೀಡುತ್ತಿಲ್ಲ’ ಎಂದು ಆಪಾದಿಸಿದರು.
‘ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆಸಿ, ಚರ್ಚಿಸಿ, ಭರವಸೆ ನೀಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.