ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪತ್ರಿಭಟನೆ
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ 2023ರ ಏಪ್ರಿಲ್ 1ಕ್ಕೆ ಅನ್ವಯವಾಗುವಂತೆ ಗ್ರಾಚುಯಿಟಿ ನೀಡುವ ಸರ್ಕಾರದ ಆದೇಶವನ್ನು ಹಿಂಪಡೆದು, ಎಲ್ಲ ನಿವೃತ್ತರಿಗೂ ಗ್ರಾಚುಯಿಟಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ನ (ಎಐಟಿಯುಸಿ) ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ‘ನಿವೃತ್ತರಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗ್ರಾಚುಯಿಟಿ ನೀಡಬೇಕೆಂದು 2022ರಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದನ್ನು ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.
‘ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುತ್ತಿರುವ ಪೌಷ್ಟಿಕ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದ್ದು, ಫಲಾನುಭವಿಗಳು ಈ ಆಹಾರ ಸೇವಿಸುತ್ತಿಲ್ಲ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಕಾರ ಸ್ಥಳೀಯ ಪೌಷ್ಟಿಕ ಆಹಾರ ನೀಡಬೇಕೆಂಬ ನಿಯಮವಿದ್ದು, ಅದನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗುತ್ತಿದೆ. ಇದರಿಂದ, ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ ಹಣ ಮಾಡಲು ಅನುಕೂಲವಾಗುವ ವ್ಯವಸ್ಥೆಯನ್ನು ರೂಪಿಸಲಾಗಿದೆ’ ಎಂದು ದೂರಿದರು.
ಟಿಯುಸಿಸಿ ಅಧ್ಯಕ್ಷ ಜಿ.ಆರ್. ಶಿವಶಂಕರ್, ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಣ್ಣ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಬಿ. ಪ್ರೇಮಾ, ಎಐಯುಟಿಯುಸಿಯ ಸೋಮಶೇಖರ ಪತ್ರಿಕಾಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.