ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ನಾಯಕಿಯರ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 19:46 IST
Last Updated 2 ಫೆಬ್ರುವರಿ 2023, 19:46 IST

ಬೆಂಗಳೂರು: ‘ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ಶಿಕ್ಷಕಿಯರೆಂದು ಪರಿಗಣಿಸಬೇಕು. ಗ್ರ್ಯಾಚ್ಯುಟಿ ಪಾವತಿಸಬೇಕು’ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ನಾಯಕಿಯರ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಪ್ರತಿಭಟನೆ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶ ಉಲ್ಲಂಘಿಸಿದ್ದ ಪ್ರಮುಖರು, ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರು. ಹೀಗಾಗಿ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು
ಹೇಳಿವೆ.

‘ಸಿಐಟಿಯು ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಎಸ್. ವರಲಕ್ಷ್ಮಿ, ಶಾಂತಾ ಘಂಟಿ, ಎಚ್‌.ಎಸ್. ಸುನಂದಾ, ಜಿ. ಕಮಲಾ ಹಾಗೂ ಜಿಲ್ಲಾ ಘಟಕಗಳ ಪ್ರಮುಖರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

‘ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸಿದ್ದ ಪ್ರತಿಭಟನೆಯಲ್ಲಿ 4 ಸಾವಿರದಿಂದ 5 ಸಾವಿರ ಮಹಿಳೆಯರು ಸೇರಿದ್ದರು. ಉದ್ಯಾನದ ಎದುರಿನ ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸುವಂತೆ ಅವರು ಭಾಷಣದ ಮೂಲಕ ಕರೆ ನೀಡಿದ್ದರು. ಇದರಿಂದಾಗಿ ಸ್ಥಳದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು’ ಎಂದು ಮೂಲಗಳು ಹೇಳಿವೆ.

‘ಕರ್ತವ್ಯದಲ್ಲಿದ್ದ ಸಿಬ್ಬಂದಿ, ಹೈಕೋರ್ಟ್ ಆದೇಶ ಪಾಲಿಸುವಂತೆ ಕೋರಿದ್ದರು. ಅವರ ಮಾತಿಗೂ ನಾಯಕಿಯರು ಸ್ಪಂದಿಸಿರಲಿಲ್ಲ. ಹೀಗಾಗಿ, ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.