ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ ಫೆ. 3ರಿಂದ

​ಪ್ರಜಾವಾಣಿ ವಾರ್ತೆ
Published 25 ಜನವರಿ 2025, 14:07 IST
Last Updated 25 ಜನವರಿ 2025, 14:07 IST
<div class="paragraphs"><p>ಅಂಗನವಾಡಿ ಕಾರ್ಯಕರ್ತೆಯರು</p></div>

ಅಂಗನವಾಡಿ ಕಾರ್ಯಕರ್ತೆಯರು

   

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಫೆಬ್ರುವರಿ 3ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ತಿಳಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೆಡರೇಶನ್ ಅಧ್ಯಕ್ಷ ಬಿ. ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ‘ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌) 50 ವರ್ಷದ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ದುಡಿಮೆಗೆ ತಕ್ಕ ಪ್ರತಿಫಲ ದೊರೆಯುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ನಿಗದಿಪಡಿಸಿ ಜಾರಿಗೊಳಿಸುವಂತೆ ಇತ್ತೀಚೆಗೆ ಗುಜರಾತ್ ಹೈಕೋರ್ಟ್‌ ನಿರ್ದೇಶಿಸಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದುವರೆಗೂ ಈ ಬಗ್ಗೆ ಕ್ರಮ ವಹಿಸಿಲ್ಲ’ ಎಂದು ದೂರಿದರು.

ADVERTISEMENT

‘ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿತಿಂಗಳು ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ನೀಡುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಕೂಡಲೇ ಜಾರಿಗೊಳಿಸಬೇಕು. ಇಂದಿನ ಬೆಲೆ ಏರಿಕೆ ಸಂದರ್ಭದಲ್ಲಿ ಕನಿಷ್ಠ ಬದುಕಲು ಅಗತ್ಯವಾದಷ್ಟು ಸಂಭಾವನೆ ನೀಡಬೇಕು. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಅದನ್ನು ಈಗ ಜಾರಿಗೊಳಿಸಬೇಕು. ನಿವೃತ್ತರಾದ ಎಲ್ಲ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಅಂಗನವಾಡಿ ಕಾರ್ಯಕರ್ತೆಯರು ಫೆ. 3ರಂದು ‍ಪ್ರಾರಂಭವಾಗುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.