ADVERTISEMENT

ಎಪಿಪಿ ನೇಮಕ ಅಕ್ರಮ ಆರೋಪ : ಪಿಐಎಲ್‌ ವಿಲೇವಾರಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2021, 5:23 IST
Last Updated 9 ಡಿಸೆಂಬರ್ 2021, 5:23 IST
   

ಬೆಂಗಳೂರು: ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್ (ಎಪಿಪಿ) ಹಾಗೂ ಸಹಾಯಕ ಸರ್ಕಾರಿ ಪ್ಲೀಡರ್‌ (ಎಜಿಪಿ) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ವಿಲೇವಾರಿ ಮಾಡಿರುವ ಹೈಕೋರ್ಟ್, ‘ಈ ಸಂಬಂಧ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದೆ.

‘2012ರಲ್ಲಿ ನಡೆದ ಎಪಿಪಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಆರೋಪಿತರ ವಿರುದ್ಧ ಸಂಬಂಧಿಸಿದ ಸಕ್ಷಮ ಪ್ರಾಧಿಕಾರಗಳು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆಕ್ಷೇಪಿಸಿ ವಕೀಲ ಆತ್ಮ ವಿ. ಹಿರೇಮಠ ಹಾಗೂ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಸಲ್ಲಿಸಿದ್ದ ಎರಡು ಪ್ರತ್ಯೇಕ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಈಗಾಗಲೇ ಪ್ರಕರಣದ ತನಿಖೆ ನಡೆಸಲಾಗಿದೆ. ದೋಷಾರೋಪಣೆ ಪಟ್ಟಿಯಲ್ಲಿರುವ ಎಪಿಪಿಗಳನ್ನು ಅಮಾನತು ಮಾಡಲಾಗಿತ್ತು. ಆದರೆ, ಕೆಎಟಿ ಇದಕ್ಕೆ ತಡೆ ನೀಡಿರುವುದರಿಂದ ಅವರು ಸೇವೆ ಮುಂದುವರೆಸಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ 2017ರ ಜೂನ್ 12ರಂದು ಸಂಬಂಧಪಟ್ಟ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. ಅಂತೆಯೇ, 2018ರ ಮಾರ್ಚ್ 15ರಂದು ಹೆಚ್ಚುವರಿ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ. ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ’ ಎಂದು ವಿವರಿಸಿದರು.

ಈ ಹೇಳಿಕೆಯನ್ನು ಪರಿಗಣಿಸಿದ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಸಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಕಾರಣ ಹೆಚ್ಚಿನ ವಿಚಾರಣೆಯ ಅಗತ್ಯವಿಲ್ಲ’ ಎಂಬ ಅಭಿಪ್ರಾಯದೊಂದಿಗೆ ಅರ್ಜಿಗಳನ್ನು ವಿಲೇವಾರಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.