ಬೆಂಗಳೂರು: ‘ನಿರ್ಭಯಾ ಯೋಜನೆಯ ‘ಸುರಕ್ಷಿತ ನಗರ’ ಕಾರ್ಯಕ್ರಮದ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ಕಾರ್ಯಕರ್ತರು, ‘ಬೆಂಗಳೂರು ಸೇಫ್ ಸಿಟಿಯೋ, ಹಗರಣಗಳ ಸಿಟಿಯೋ’ ಎಂಬ ಫಲಕಗಳನ್ನು ಪ್ರದರ್ಶಿಸಿದರು.
ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, ‘ನಗರದಲ್ಲಿ ಮಹಿಳೆಯರ ಸುರಕ್ಷತೆಗಾಗಿ ₹ 612 ಕೋಟಿ ಮೊತ್ತದ ಕಾಮಗಾರಿಯ ಗುತ್ತಿಗೆ ನೀಡುವ ಪ್ರಕ್ರಿಯೆಯಲ್ಲೇ ಭ್ರಷ್ಟಾಚಾರ ನಡೆದಿದೆ. ಇದನ್ನು ಪ್ರಶ್ನಿಸಿದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಾಚಿಕೆಯಾಗಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಆಡಳಿತಕ್ಕೆ ಬಂದ ಬಳಿಕ ಆ ನಗರದ ಹಲವು ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲಿ ಅಳವಡಿಸಿರುವ ಕ್ಯಾಮೆರಾವೊಂದದ ದರ ₹ 40 ಸಾವಿರ. ಆದರೆ, ಬೆಂಗಳೂರಿನಲ್ಲಿ ಗುತ್ತಿಗೆ ಪ್ರಕ್ರಿಯೆ ನಡೆಸುವಾಗ ಒಂದು ಕ್ಯಾಮೆರಾಕ್ಕೆ ತಲಾ ₹ 8 ಲಕ್ಷ ದರ ನಿಗದಿ ಮಾಡಲಾಗಿದೆ. ಇದೇ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ’ ಎಂದೂ ಹೇಳಿದರು.
‘ಹಗರಣದ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಮಾತನಾಡುತ್ತಿಲ್ಲ. ಅವರೆಲ್ಲ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ’ ಎಂದೂ ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.