ADVERTISEMENT

ಶಿಕ್ಷಕರ ವರ್ಗಾವಣೆಗೆ ಅರ್ಜಿ: ಮಾರ್ಚ್ 4ರವರೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 18:28 IST
Last Updated 30 ಜನವರಿ 2023, 18:28 IST

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾರ್ಚ್‌ 4ರವರೆಗೆ ವಿಸ್ತರಿಸಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜ.30ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಯನ್ನು ಕೆಲ ದಿನಗಳ ಹಿಂದೆ ಸ್ಥಗಿತಗೊಳಿಸಿ, ಸುತ್ತೋಲೆ ಹೊರಡಿಸಿದ್ದ ಕಾರಣ ವರ್ಗಾವಣೆ ಪ್ರಕ್ರಿಯೆಗೂ ತೊಡಕಾಗಿತ್ತು. ಹಾಗಾಗಿ, ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಫೆ.4ರ ಒಳಗೆ ಶಿಕ್ಷಕರ ಸೇವಾ ಮಾಹಿತಿ ಅಪ್‌ಲೋಡ್‌ ಮಾಡಬೇಕು. ವಿನಾಯಿತಿ ಸೇರಿದಂತೆ ಕೋರಿಕೆಯ ಅಗತ್ಯ ದಾಖಲೆಗಳನ್ನು ಫೆ.8ರ ಒಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು. ಆಯಾ ಶಿಕ್ಷಣಾಧಿಕಾರಿಗಳು 10ರ ಒಳಗೆ ಪ್ರಮಾಣಪತ್ರಗಳ ನೈಜತೆ ಪರಿಶೀಲಿಸಿ ದೃಢೀಕರಿಸಬೇಕು. ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆಯ ನಂತರ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಮಾರ್ಚ್‌ 4ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.