ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪಪರಿಶಿಷ್ಟ ಪಂಗಡಗಳ (ಎಸ್ಸಿ- ಎಸ್ಟಿ) ಆಯೋಗಕ್ಕೆ ತುರ್ತಾಗಿ ಅಧ್ಯಕ್ಷರನ್ನು ನೇಮಕ ಮಾಡಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಅದೇಶಿಸಿದೆ.
ಈ ಸಂಬಂಧ ಕೊಳ್ಳೆಗಾಲದ ಸಿ.ಎಲ್. ಶ್ರೀನಿವಾಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹೈಕೋರ್ಟ್ ವಕೀಲ ಸದಾನಂದ ಶಾಸ್ತ್ರಿ ಅವರು ‘ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 2002ರ-ಕಾಯ್ದೆ ಅಡಿ ಆಯೋಗ ರಚಿಸಲಾಗಿದ್ದು, ಅದಕ್ಕೆ ಎರಡೂವರೆ ವರ್ಷಗಳಿಂದ ಅಧ್ಯಕ್ಷರ ನೇಮಕವಾಗಿಲ್ಲ. ಇಲ್ಲಿ ಲಕ್ಷಕ್ಕೂ ಅಧಿಕ ಪ್ರಕರಣಗಳು ಬಾಕಿ ಇದ್ದು, ತುಳಿತಕ್ಕೆ ಒಳಗಾದ ಸಮುದಾಯಗಳ ಜನರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ, ತುರ್ತಾಗಿ ಅಧ್ಯಕ್ಷರ ನೇಮಕ ಮಾಡಬೇಕು’ ಎಂದು ಕೋರಿದರು.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಕಳೆದ ಎರಡೂವರೆ ವರ್ಷಗಳಿಂದ ಅಧ್ಯಕ್ಷರನ್ನು ನೇಮಕ ಮಾಡಿಲ್ಲ. ಇದರಿಂದ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿವೆ. ಆದ್ದರಿಂದ ತಕ್ಷಣವೇ ಅಧ್ಯಕ್ಷರನ್ನು ನೇಮಕ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನು ಆಲಿಸಿದ ನ್ಯಾಯಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಫೆಬ್ರುವರಿ 17ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.