ADVERTISEMENT

ಕಿದ್ವಾಯಿ ಸಂಸ್ಥೆಗೆ ಆಡಳಿತಾಧಿಕಾರಿ ನೇಮಕ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2024, 15:59 IST
Last Updated 22 ಫೆಬ್ರುವರಿ 2024, 15:59 IST
   

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸುಧಾರಣೆಗೆ ಐಎಎಸ್ ಅಧಿಕಾರಿ ಎನ್. ಮಂಜುಶ್ರೀ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. 

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಈ ನೇಮಕಾತಿಯು ಆರು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರಲಿದೆ. 

ಸಂಸ್ಥೆಯಲ್ಲಿ ಒದಗಿಸುತ್ತಿರುವ ಸೇವೆಗಳಿಗೆ ರೋಗಿಗಳಿಂದ ಹಚ್ಚಿನ ಶುಲ್ಕವನ್ನು ಪಡೆಯುತ್ತಿರುವುದು, ಅನುದಾನದ ದುರ್ಬಳಕೆ, ಭ್ರಷ್ಟಾಚಾರ, ಸಂಸ್ಥೆಯ ಸಿಬ್ಬಂದಿ ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿ ಸಂಸ್ಥೆಗೆ ಆರ್ಥಿಕ ನಷ್ಟ ಉಂಟು ಮಾಡುತ್ತಿರುವುದು, ರೋಗಿಗಳಿಗೆ ಕಳಪೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವುದು, ಔಷಧಗಳ ಕೊರತೆ, ನಿಗದಿತ ಸಂಸ್ಥೆಗೆ ಹೆಚ್ಚಿನ ಲಾಭ ಬರುವಂತೆ ಟೆಂಡರ್ ನೀಡಿರುವುದು ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದಿರುವುದರ ಬಗ್ಗೆ ಸಂಸ್ಥೆಯಲ್ಲಿನ ವೈದ್ಯರು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಾಲ್ಕು ಪುಟಗಳ ವರದಿ ಸಹಿತ ದೂರು ನೀಡಿ, ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.

ADVERTISEMENT

ಈ ದೂರುಗಳ ಬಗ್ಗೆ ತನಿಖೆ ನಡೆಸಲು ಐಎಎಸ್ ಅಧಿಕಾರಿ ಅರುಂಧತಿ ಚಂದ್ರಶೇಖರ್ ನೇತೃತ್ವದಲ್ಲಿ ಸರ್ಕಾರ ಸಮಿತಿ ರಚಿಸಿತ್ತು. ಈ ಸಮಿತಿಯು 2023ರ ನ.16ರಂದು ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಆಡಳಿತ ವ್ಯವಸ್ಥೆ ಕುಸಿದಿರುವ ಬಗ್ಗೆ ತಿಳಿಸಲಾಗಿತ್ತು. ಒಟ್ಟಾರೆ ಕಾರ್ಯನಿರ್ವಹಣೆಯ ಮೇಲ್ವಿಚಾರಣೆಗೆ ಆಡಳಿತ ಸೇವೆಗೆ ಸೇರಿದ ಅಧಿಕಾರಿಯನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸುವ ಬಗ್ಗೆ ಶಿಫಾರಸು ಮಾಡಲಾಗಿತ್ತು. ಅದರಂತೆ ಈಗ ನೇಮಕ ಮಾಡಲಾಗಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.