ADVERTISEMENT

ಎಐಯಿಂದ ಉದ್ಯೋಗ ನಷ್ಟವಾಗದಂತೆ ಭಾಷೆ ಬೆಳೆಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

70ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2025, 9:41 IST
Last Updated 1 ನವೆಂಬರ್ 2025, 9:41 IST
   

ಬೆಂಗಳೂರು: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ಮಾಹಿತಿ ತಂತ್ರಜ್ಞಾನ‌ ಯುಗ ಈಗ ಕೃತಕ ಬುದ್ಧಿಮತ್ತೆಯ ಯುಗವಾಗಿ ಮಾರ್ಪಾಡಾಗುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕವೂ ಎದುರಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕು ಎಂದು ಹೇಳಿದರು.

ADVERTISEMENT

ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ₹ 2,500 ಕೋಟಿ ವೆಚ್ಚದಲ್ಲಿ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನಾಗಿ (ಕೆಪಿಎಸ್‌) ಉನ್ನತೀಕರಿಸಲಾಗುತ್ತಿದೆ. ಪ್ರತಿ ಶಾಲೆಯನ್ನು ₹ 4 ಕೋಟಿ ಅಂದಾಜು ವೆಚ್ಚದಲ್ಲಿ  ಮೂಲಸೌಕರ್ಯಗಳನ್ನು ಒದಗಿಲಾಗುವುದು ಎಂದು ಹೇಳಿದರು.

ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ₹ 483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಭಾಷಣದ ಮುಖ್ಯಾಂಶಗಳು

* ಒಕ್ಕೂಟ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ತಾರತಮ್ಯ ಧೋರಣೆಯನ್ನು ತೋರುತ್ತಿದೆ. ₹ 4.5 ಲಕ್ಷ ಕೋಟಿಗೂ ಹೆಚ್ಚಿನ ತೆರಿಗೆ ಸಂಪತ್ತನ್ನು ಕರ್ನಾಟಕವು ನೀಡುತ್ತಿದೆ. ಆದರೆ ನಮಗೆ ಬಿಡಿಗಾಸು ಕೊಟ್ಟು ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತಿದೆ.

* ಹಿಂದಿ ಭಾಷೆಯನ್ನು ಹೇರಿಕೆ ಮಾಡಲು ನಿರಂತರ ಹುನ್ನಾರ ನಡೆಯುತ್ತಿದೆ. ಹಿಂದಿ, ಸಂಸ್ಕೃತ ಭಾಷೆಗಳ ಅಭಿವೃದ್ಧಿಗೆ ಮಾತ್ರ ಅನುದಾನಗಳನ್ನು ನೀಡಲಾಗುತ್ತಿದೆ. ಕನ್ನಡವೂ ಸೇರಿದಂತೆ ಉಳಿದ ದೇಶಭಾಷೆಗಳನ್ನು ನಿರ್ಲಕ್ಷಿಸಲಾಗುತ್ತಿದೆ.

* ರಾಜ್ಯದ ಅಭಿವೃದ್ಧಿಗೆ ಪೂರಕವಾಗಬೇಕಾಗಿದ್ದ ಯೋಜನೆಗಳನ್ನು ಕರ್ನಾಟಕಕ್ಕೆ ಕೊಡದೆ ವಂಚಿಸಲಾಗುತ್ತಿದೆ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿದ್ದರೂ, ನೀಡಬೇಕಾದ ಅನುದಾನಗಳನ್ನೂ ಕೊಡದೆ ಅನ್ಯಾಯ ಮಾಡಲಾಗುತ್ತಿದೆ.

* ಕಾಲಕಾಲಕ್ಕೆ ಶಿಕ್ಷಕರ ನೇಮಕಾತಿ ಮತ್ತು ತರಬೇತಿಗಳನ್ನು ನಡೆಸಲಾಗುತ್ತಿದೆ. 2024ರಲ್ಲಿ 14,499 ಪದವಿ ಪ್ರಾಥಮಿಕ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಮತ್ತು ಇತರೆ ಪ್ರದೇಶಗಳಲ್ಲಿ 5,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. 800 ಹೊಸ ಪಿಯು ಉಪನ್ಯಾಸಕರ ನೇಮಕಾತಿ ಮಾಡಲಾಗಿದೆ. ಹೊಸದಾಗಿ 18000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಅನುದಾನಿತ ಶಾಲೆಗಳಿಗೆ 5,000 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಲು ಅನುಮತಿ ನೀಡಲಾಗಿದೆ.

* ಮೊಬೈಲ್ ಫೋನು, ಇಂಟರ್ನೆಟ್‌, ಆರ್ಟಿಫೀಷಿಯಲ್ ಇಂಟೆಲಿಜೆನ್ಸ್‌ ಇಬ್ಬಾಯ ಖಡ್ಗದಂತೆ ಕೆಲಸ ಮಾಡುತ್ತಿವೆ. ಶೇ 25 ರಷ್ಟು ಅನುಕೂಲವಾಗಿದೆಯೆಂದು ಭಾವಿಸುವಾಗಲೆ ಶೇ 75 ರಷ್ಟು ಪ್ರಮಾಣದಲ್ಲಿ ಆತಂಕಗಳನ್ನು ಉಂಟು ಮಾಡುತ್ತಿದೆ. ಮಕ್ಕಳ ಕುತೂಹಲಗಳನ್ನು, ಮುಗ್ಧತೆಯನ್ನು ಇವು ಕಿತ್ತುಕೊಳ್ಳುತ್ತಿವೆ.

* ನಮ್ಮ ರಾಜ್ಯವು ತಲಾದಾಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಶೇ.101 ರಷ್ಟು ಪ್ರಗತಿಯನ್ನು ಸಾಧಿಸಿದೆ. ಈ ಮೂಲಕ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಜನರಲ್ಲಿ ಕೊಳ್ಳುವ ಸಾಮರ್ಥ್ಯ ವನ್ನು ಹೆಚ್ಚಿಸಿ, ಅವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವ ಮೂಲಕ ಅಭಿವೃದ್ಧಿ ಸಾಧ್ಯ ಎಂಬುದನ್ನು ನಾವು ಸಾಧಿಸಿ ತೋರಿಸಿದ್ದೇವೆ.

* ರಾಜ್ಯದ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೆ.ಎಂ.ಎಫ್. ನಿಂದ “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯೊಂದಿಗೆ “ನಂದಿನಿ’ ಬ್ರ್ಯಾಂಡ್‌ನಲ್ಲಿ 175ಕ್ಕೂ ಅಧಿಕ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ರಾಜ್ಯ, ಹೊರರಾಜ್ಯ ಮತ್ತು ವಿದೇಶಗಳ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಕೆ.ಎಂ.ಎಫ್. ನಿಂದ ದಿನಕ್ಕೆ 1 ಕೋಟಿ ಲೀಟರ್‌ಗೂ ಹೆಚ್ಚಿನ ಹಾಲನ್ನು ಸಂಗ್ರಹಿಸಲಾಗುತ್ತಿದೆ.

* ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ದೇಶದ ಸರಾಸರಿ ನಿರುದ್ಯೋಗದ ಪ್ರಮಾಣ ಶೇ.7 ಕ್ಕಿಂತ ಹೆಚ್ಚಿಗೆ ಇದೆ. ಕರ್ನಾಟಕದಲ್ಲಿ ಶೇ.2.5 ರಷ್ಟಿದೆಯೆಂದು ಸಿಎಂಐಇ ಸಂಸ್ಥೆಯ ಅಂಕಿ ಅಂಶಗಳು ತಿಳಿಸುತ್ತಿವೆ.

* ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಕಳೆದ 5 ವರ್ಷಗಳಲ್ಲಿ 15 ನೇ ಹಣಕಾಸು ಆಯೋಗದ ಮೂಲಕ ಕೇಂದ್ರವು ಮಾಡಿದ ದ್ರೋಹದಿಂದ ಸುಮಾರು ₹ 70 ಸಾವಿರ ಕೋಟಿ ನಷ್ಟವಾಗಿದೆ. 15 ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ ಅನುದಾನ, ಕೇಂದ್ರವು ಬಜೆಟ್‌ನಲ್ಲಿ ಘೋಷಿಸಿ ಕೊಡದೆ ಹೋದ ಅನುದಾನ, ಯೋಜನೆಗಳಲ್ಲಾದ ಅನ್ಯಾಯ ಸೇರಿ ಸುಮಾರು ₹ 1 ಲಕ್ಷ ಕೋಟಿಗಿಂತಲೂ ಹೆಚ್ಚು ಅನ್ಯಾಯವಾಗಿದೆ. ಇದರ ವಿರುದ್ಧ ಸರ್ಕಾರ ಹೋರಾಟ ನಡೆಸುತ್ತಿದೆ. ಜನ ಸಮುದಾಯವು ಕೂಡ ಗಂಭಿರವಾಗಿ ಪ್ರಶ್ನಿಸಬೇಕಾದ ಅನಿವಾರ್ಯತೆ ಉದ್ಭವಿಸಿದೆ.

* ಬಲಿಷ್ಠ ಒಕ್ಕೂಟ ವ್ಯವಸ್ಥೆಯ ಕನಸು ನಮ್ಮ ಸಂವಿಧಾನ ಪಿತೃಗಳದ್ದಾಗಿತ್ತು. ಇದನ್ನು ಕಳೆದ ಕೆಲವು ವರ್ಷಗಳಿಂದ ಛಿದ್ರಗೊಳಿಸಿ ರಾಜ್ಯಗಳ ಅಧಿಕಾರವನ್ನು ಕಬ್ಜಾ ಮಾಡುವ ವಸಾಹತುವಾದಿ ಮನೋಭಾವ ಕಾಣುತ್ತಿದೆ. ಕೇಂದ್ರದ ಈ ತಾರತಮ್ಯಗಳ ವಿರುದ್ಧ ಇಡೀ ನಾಡು ಸಂವಿಧಾನಾತ್ಮಕವಾಗಿ ನಿಂತು ಪ್ರತಿಭಟಿಸದೆ ಹೋದರೆ ನಮ್ಮನ್ನು ಆಪೋಶನ ತೆಗೆದುಕೊಳ್ಳಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.