ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು
ಬೆಂಗಳೂರು: ಪ್ರತಿ ತಿಂಗಳು ಕನಿಷ್ಠ ₹10 ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿರುವ ಆಶಾ ಕಾರ್ಯಕರ್ತೆಯರು, ಇದೇ 12ರಿಂದ 14ರವರೆಗೆ ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ‘ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ಪ್ರತಿಭಟನೆ ನಡೆಸಿ, ₹15 ಸಾವಿರ ನಿಶ್ಚಿತ ಗೌರವಧನ ನಿಗದಿಪಡಿಸಲು ಆಗ್ರಹಿಸಲಾಗಿತ್ತು. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 2025ರ ಏಪ್ರಿಲ್ ತಿಂಗಳಿನಿಂದ ಪ್ರತಿ ತಿಂಗಳು ಕನಿಷ್ಠ ₹ 10 ಸಾವಿರ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, ಈ ಬಗ್ಗೆ ಈವರೆಗೂ ಆದೇಶ ಹೊರಡಿಸಿಲ್ಲ. ಆದ್ದರಿಂದ ಮತ್ತೆ ಪ್ರತಿಭಟನೆಯ ಹಾದಿ ಹಿಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೂರು ದಿನಗಳು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ’ ಎಂದರು.
‘ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ತಿಂಗಳು ಕನಿಷ್ಠ ₹10 ಸಾವಿರ ಗೌರವಧನ ನೀಡುವ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಆದೇಶ ಹೊರಡಿಸಬೇಕು. ಈ ವರ್ಷದ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ತಿಂಗಳ ಪ್ರೋತ್ಸಾಹ ಧನ ₹ 1 ಸಾವಿರ ಹೆಚ್ಚಿಸಿದಂತೆ, ಆಶಾ ಕಾರ್ಯಕರ್ತೆಯರಿಗೂ ಹೆಚ್ಚಿಸಬೇಕು. ಆಶಾಗಳ ಕಾರ್ಯನಿರ್ವಹಣೆ ಬಗ್ಗೆ ಅವೈಜ್ಞಾನಿಕ ಮೌಲ್ಯಮಾಪನವನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.
‘ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಈಗಿರುವ ಜನಸಂಖ್ಯಾ ಮಿತಿಯನ್ನು ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕಾರಣವಿಲ್ಲದೇ ಕೆಲಸದಿಂದ ತೆಗೆಯಬಾರದು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಇಡಿಗಂಟು ಇಡಬೇಕು. ನಗರದ ಆಶಾಗಳಿಗೆ ಗೌರವ ಧನವನ್ನು ₹2 ಸಾವಿರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.