ಬೆಂಗಳೂರು: ಮಾಸಿಕ ಕನಿಷ್ಠ ₹ 15 ಸಾವಿರ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯದಲ್ಲಿರುವ 42 ಸಾವಿರ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಕೂಡಲೇ ಬೇಡಿಕೆ ಈಡೇರಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
‘ಹಗಲಿರುಳು ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ಆಶಾ ಕಾರ್ಯಕರ್ತೆಯರಿಗೆ ಜೀವನ ನಿರ್ವಹಣೆಗೆ ಸಾಕಾಗುವಷ್ಟು ಗೌರವಧನ ಇಲ್ಲ. ಕಳೆದ ವರ್ಷ ಅಹೋರಾತ್ರಿ ಧರಣಿ ನಡೆದ ವೇಳೆ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ನಂತರ ಅಧಿಕಾರಿಗಳ ಜೊತೆಗೆ 15 ಬಾರಿ ಸಭೆ ನಡೆದಿದೆ. ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳೆ ಸಚಿವರು, ಶಾಸಕರಿಗೆ ಮನವಿ ನೀಡಿದರೂ ಪರಿಹಾರ ಮಾತ್ರ ಮರೀಚಿಕೆ ಆಗಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಗೌರವಧನದ ಜೊತೆಗೆ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ ₹15 ಸಾವಿರ ಗೌರವಧನ ನಿಗದಿಪಡಿಸಬೇಕು. ನಗರ ಪ್ರದೇಶಗಳ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಜೀವನ ನಿರ್ವಹಣೆ ವೆಚ್ಚ ಭರಿಸುವುದಕ್ಕಾಗಿ ₹2 ಸಾವಿರ ಹೆಚ್ಚುವರಿ ಭತ್ಯೆ ನೀಡಬೇಕು. ಎಂಟು ವರ್ಷಗಳಿಂದ ಆಶಾನಿಧಿ ಪೋರ್ಟಲ್‌ನಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಗಳು ದಾಖಲಾಗದೇ, ಪ್ರೋತ್ಸಾಹಧನವೂ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು. ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ವರ್ಷಕ್ಕೆ ₹5 ಲಕ್ಷ ನೀಡಬೇಕು. ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾಚ್ಯುಟಿ, ಭವಿಷ್ಯನಿಧಿ, ವಿಮೆ ಸೌಲಭ್ಯ ಒದಗಿಸಬೇಕು’ ಎಂದು ಒತ್ತಾಯಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕಿ ಡಾ. ಎಂ.ಜಿ. ತ್ರಿವೇಣಿ, ಉಪ ನಿರ್ದೇಶಕ (ಇಎಂಎಸ್- ಆಶಾ) ಡಾ. ಪ್ರಭುದೇವ ಬಿ. ಗೌಡ ಅವರು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.
ಪ್ರತಿಭಟನಕಾರರನ್ನು ಉದ್ದೇಶಿಸಿ ಸಾಮಾಜಿಕ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು, ಎಸ್‌ಯುಸಿಐ (ಸಿ) ರಾಜ್ಯ ಮಂಡಳಿ ಕಾರ್ಯದರ್ಶಿ ಕೆ.ಉಮಾ, ಎಐಯುಟಿಯುಸಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಕೆ.ರಾಧಾಕೃಷ್ಣ ಅವರು ಮಾತನಾಡಿದರು.
‘ಸರ್ಕಾರ ಭರವಸೆ ನೀಡಿ ಬೇಡಿಕೆ ಈಡೇರಿಸಿಲ್ಲ. ಹಾಗಾಗಿ ಬೇಡಿಕೆ ಈಡೇರುವವರೆಗೂ ಮುಷ್ಕರ ವಾಪಸ್ ಪಡೆಯುವುದಿಲ್ಲ. ಇತರೆ ಜಿಲ್ಲೆಗಳಿಂದ ಬುಧವಾರ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.